ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಹಾಗೂ ಸಮಾಜದ ಎಲ್ಲಾ ಉಪ ಪಂಗಡಗಳನ್ನು ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಒತ್ತಾಯಿಸಿ ಇಂದಿನಿಂದ ಮತ್ತೆ ಹೋರಾಟ ಆರಂಭವಾಗಲಿದೆ.
ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಇಂದಿನಿಂದ 6ನೇ ಹಂತದ ಹೋರಾಟ ಆರಂಭವಾಗಲಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಬಹಿರಂಗ ಸಭೆ ನಡೆಯಲಿದ್ದು, ಬಳಿಕ ರಾಷ್ಟ್ರೀಯ ಹೆದ್ದಾರಿಗೆ ಪಾದಯಾತ್ರೆ ಮೂಲಕ ತೆರಳಿ ಇಷ್ಟಲಿಂಗ ಪೂಜೆ ನೆರವೇರಿಸುವ ಮೂಲಕ ರಾಜ್ಯಾದ್ಯಂತ ಹೋರಾಟಕ್ಕೆ ಚಾಲನೆ ದೊರೆಯಲಿದೆ. ಬಳಿಕ ಛತ್ರಪತಿ ಶಿವಾಜಿ ಮಹಾರಾಜರ ಸಂಸ್ಕೃತಿ ಭವನದಿಂದ ರ್ಯಾಲಿ ಆರಂಭವಾಗಲಿದೆ. ಹಂತ ಹಂತವಾಗಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಪಂಚಮಸಾಲಿ ಸಮುದಾಯ ಮುಖಂಡರು ನಿರ್ಧರಿಸಿದ್ದಾರೆ.
ಪಂಚಮಸಾಲಿ ಮೀಸಲಾತಿ ವಿಚಾರ ಕೋರ್ಟ್ ನಲ್ಲಿದ್ದು, ಕಾನೂನು ತೊಡಕು ನಿವಾರಣೆಗೆ ಸರ್ಕಾರ ಕ್ರಮ ಕೈಗೊಳ್ಳುವಂತೆ ಹಾಗೂ ಪಂಚಮಸಾಲಿ ಮುಖಂಡರ ಸಭೆ ಕರೆಯುವಂತೆ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಒಟ್ಟಾರೆ ಇಂದಿನಿಂದ ಪಂಚಮಸಾಲಿ ಮೀಸಲಾತಿ ಚಳುವಳಿ ಮತ್ತೆ ಆರಂಭವಾಗಲಿದೆ.