ಬೆಂಗಳೂರು: ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನಿಗದಿಪಡಿಸುವ ಬೇಡಿಕೆ ಬಗ್ಗೆ ಕಾರ್ಮಿಕ ಮತ್ತು ಆರ್ಥಿಕ ಇಲಾಖೆ ಒಪ್ಪಿಗೆಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿ ಬಗ್ಗೆ ಸಂಬಂಧಿಸಿದವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಮನವಿ ಸ್ವೀಕರಿಸಿದ ಸಚಿವರು, ಗ್ರಾಮ ಪಂಚಾಯಿತಿಗಳ ನೀರುಗಂಟಿಗಳು ನಿರ್ವಹಿಸುವ ಕೆಲಸವನ್ನು ವಿವಿಧೋದ್ದೇಶ ಎಂದು ನಿಗದಿಪಡಿಸಿರುವುದನ್ನು ಕೈಬಿಟ್ಟು ನಿರ್ದಿಷ್ಟ ಕೆಲಸ ಮಾಡಲು ಕ್ರಮ ಕೈಗೊಳ್ಳಲಾಗುವುದು. ಗ್ರಾಫಂ ನೌಕರರಿಗೆ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗುವುದು, ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆ ಸೇರಿ ಇತರೆ ಬೇಡಿಕೆ ಈಡೇರಿಸಲು ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.