ಬೆಂಗಳೂರು: ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಬಗ್ಗೆ ಇರುವ ಗೊಂದಲ ನಿವಾರಣೆಗೆ ಸಂಬಂಧಿಸಿದಂತೆ ಶಾಸಕ ಅನಿಲ್ ಚಿಕ್ಕಮಾದು ನೇತೃತ್ವದ ಸಮುದಾಯದ ಮುಖಂಡರ ನಿಯೋಗ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೆಲವು ಸೂಚನೆ ನೀಡಿದ್ದಾರೆ.
ಹಳೆ ಮೈಸೂರು ಭಾಗದಲ್ಲಿ ಪರಿವಾರ ಪದವು ನಾಯಕ ಸಮುದಾಯಕ್ಕೆ ಪರ್ಯಾಯವಾಗಿದ್ದು, ಈ ಸಮುದಾಯವನ್ನು ಭಾರತ ಸರ್ಕಾರವು ಪರಿಶಿಷ್ಟ ಪಂಗಡದವರ ಪಟ್ಟಿಗೆ ಸೇರಿಸಿದೆ. ಆದ್ದರಿಂದ ಈಗ ಹಿಂದುಳಿದ ವರ್ಗಗಳ ಪಟ್ಟಿಯಿಂದ ಕೈಬಿಟ್ಟು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಿರುವ ಕುರಿತು ಸ್ಪಷ್ಟ ಸುತ್ತೋಲೆ ಹೊರಡಿಸಿ ಗೊಂದಲ ನಿವಾರಿಸಬೇಕು ಎಂದು ತಿಳಿಸಿದ್ದಾರೆ.
ಈ ಗೊಂದಲದ ಕಾರಣದಿಂದ ಸುಳ್ಳು ಜಾತಿ ಪ್ರಮಾಣ ಪತ್ರ ಕುರಿತಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ 58 ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಹಿಂಪಡೆಯುವ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ನಿಯೋಗದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಅವರ ಜತೆಗೆ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷರಾದ ಎಸ್.ಸಿ.ಬಸವರಾಜು, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಚಿಕ್ಕೀರನಾಯ್ಕ, ದೇವರಾಜ ಕುಮಾರ್, ದೇವಪ್ಪ ನಾಯಕ, ನಾಗರಾಜ ಕ್ಯಾತನಹಳ್ಳಿ, ಗಿನ್ನಳ್ಳಿ ರಾಜಾನಾಯಕ, ಮೈಸೂರು ಪಾಲಿಕೆ ಸದಸ್ಯರಾದ ಲೋಕೇಶ್, ಕೋಟೆ ತಾಲ್ಲೂಕು ನಾಯಕ ಸಮುದಾಯದ ಮುಖಂಡರಾದ ಶಂಭುಲಿಂಗನಾಯಕ್ ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಸಭೆಯಲ್ಲಿ ಭಾಗವಹಿಸಿದ್ದರು.