ನವದೆಹಲಿ: ಸಂಸತ್ ನಲ್ಲಿ ನಿನ್ನೆ ನಡೆದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಯುಎಪಿಎ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ದೆಹಲಿ ನ್ಯಾಯಾಲಯ ಗುರುವಾರ ಆದೇಶ ನೀಡಿದೆ.
ಸಂಸತ್ತಿನ ಭದ್ರತಾ ಉಲ್ಲಂಘನೆಯ ಆರೋಪಿಗಳಾದ ಮನೋರಂಜನ್ ಡಿ, ಸಾಗರ್ ಶರ್ಮಾ, ನೀಲಂ ಮತ್ತು ಅಮೋಲ್ ಶಿಂಧೆ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆ(ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆಯ(ಐಪಿಸಿ) ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆಯು ಯೋಜಿತ ದಾಳಿಯಾಗಿದೆ ಎಂದು ದೆಹಲಿ ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಸಂಸತ್ತಿನೊಳಗೆ ನುಗ್ಗಿದ ಆರೋಪದಲ್ಲಿ ಬಂಧಿತರಾಗಿರುವ ನಾಲ್ವರು ಆರೋಪಿಗಳನ್ನು ದೆಹಲಿ ಪೊಲೀಸರು ಗುರುವಾರ ಇಲ್ಲಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 15 ದಿನಗಳ ಕಸ್ಟಡಿಗೆ ಕೋರಿದ್ದಾರೆ. ಬಂಧಿತ ನಾಲ್ವರನ್ನೂ ಭಯೋತ್ಪಾದನೆ ಎಂದು ಆರೋಪಿಸಿದ ಪ್ರಾಸಿಕ್ಯೂಷನ್, ಅವರು ಭಯವನ್ನು ಹುಟ್ಟುಹಾಕಲು ಪ್ರಯತ್ನಿಸಿದರು ಎಂದು ಹೇಳಿದರು. ನ್ಯಾಯಾಲಯವು ನಾಲ್ವರು ಆರೋಪಿಗಳನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.
ದೆಹಲಿ ಪೊಲೀಸ್ ವಿಶೇಷ ಕೋಶವು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ ಗಳಡಿ ಕೇಸ್ ದಾಖಲಿಸಲಾಗಿದೆ.