ಬೆಂಗಳೂರು: ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಕುರಿತು ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸುವ ಬಗ್ಗೆ ಬುಧವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ವರ್ಷ ಕೊರೋನಾ ಕಾರಣದಿಂದ ವಿದ್ಯಾರ್ಥಿಗಳ ಕಲಿಕೆ ಅನುಭವ ಸಮನಾಗಿಲ್ಲ. ಹಾಗಾಗಿ ಶಿಕ್ಷಕರು ವಿದ್ಯಾರ್ಥಿಗಳ ಕಲಿಕೆ ಅವಲೋಕಿಸಿ ದಾಖಲಿಸುವ ಅಗತ್ಯವಿದೆ. ಶಾಲೆಗಳು ಸಾರಾಂಶ ಮೌಲ್ಯಮಾಪನ ಮಾಡಬೇಕಿದೆ. ಮುಂದಿನ ತರಗತಿಗೆ ಪಾಸ್ ಮಾಡುವಲ್ಲಿ ರಚನಾತ್ಮಕ ಮೌಲ್ಯಮಾಪನ ಪರಿಗಣಿಸಿ ತೀರ್ಮಾನ ಕೈಗೊಳ್ಳಬೇಕೆಂಬ ಅಭಿಪ್ರಾಯ ಕೇಳಿಬಂದಿದೆ. ಎಲ್ಲರ ಅಭಿಪ್ರಾಯ ಆಧರಿಸಿ ಸೂಕ್ತ ನಿರ್ಧಾರ ಪ್ರಕಟಿಸುವುದಾಗಿ ಸಚಿವರು ಹೇಳಿದ್ದಾರೆ.
ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳನ್ನು ಪಾಸ್ ಮಾಡಬಾರದೆಂಬ ಅಭಿಪ್ರಾಯ ಕೂಡ ಕೇಳಿಬಂದಿದೆ. ಮೌಲ್ಯಾಂಕನ ಪರೀಕ್ಷೆ ಮೂಲಕವೇ ಮುಂದಿನ ತರಗತಿಗೆ ಪಾಸ್ ಮಾಡಲು ಕ್ರಮ ಕೈಗೊಳ್ಳಬೇಕೆಂಬ ಅಭಿಪ್ರಾಯ ಕೇಳಿ ಬಂದಿದ್ದು ಎಲ್ಲಾ ಅಭಿಪ್ರಾಯಗಳ ಬಗ್ಗೆ ಚರ್ಚೆ ನಡೆಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.