ಬನ್ಸ್ವಾರಾ(ರಾಜಸ್ಥಾನ): ಆಂಬ್ಯುಲೆನ್ಸ್ ನಲ್ಲಿ ಇಂಧನ ಖಾಲಿಯಾಗಿ ರೋಗಿಯೊಬ್ಬರು ಸಾವನ್ನಪ್ಪಿದ ಘಟನೆ ರಾಜಸ್ಥಾನದ ಬನ್ಸ್ವಾರಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಬನ್ಸ್ವಾರಾ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ(ಸಿಎಂಹೆಚ್‌ಒ) ಡಾ.ಬಿ.ಪಿ. ವರ್ಮಾ ಹೇಳಿದ್ದಾರೆ.
ರೋಗಿಯನ್ನು ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನದಲ್ಲಿ ರೋಗಿಯ ಸಂಬಂಧಿಕರು ವಾಹನವನ್ನು ತಳ್ಳುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ.
ಘಟನೆಯ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದೇವೆ. ನಾವು ಸಂತ್ರಸ್ತರ ಸಂಬಂಧಿಕರನ್ನು ಭೇಟಿ ಮಾಡಿ ಯಾವುದೇ ನಿರ್ಲಕ್ಷ್ಯ ಕಂಡುಬಂದಲ್ಲಿ ಪತ್ತೆ ಮಾಡುತ್ತೇವೆ ಎಂದು ಅವರು ಹೇಳಿದರು.
ನಮ್ಮ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುತ್ತದೆ, ಆದರೆ, ಖಾಸಗಿ ಆಂಬ್ಯುಲೆನ್ಸ್ ನಲ್ಲಿ ಇಂಧನ ಖಾಲಿಯಾಗಿ ರೋಗಿಯು ಸಾವನ್ನಪ್ಪಿದರೆ, ಆಂಬ್ಯುಲೆನ್ಸ್ ನಿರ್ವಹಣಾ ಸಂಸ್ಥೆಯೇ ಹೊಣೆ. ಹೊಣೆಗಾರರ ವಿರುದ್ಧ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.