ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಮಾತನಾಡುವ ವೇಳೆ ಹಿಂದೂಗಳ ಕುರಿತ ವಿಚಾರ ಪ್ರಸ್ತಾಪಿಸಿದ್ದಕ್ಕೆ ಪ್ರತಿಕ್ರಿಯ ವ್ಯಕ್ತಪಡಿಸಿದ್ದ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಇದನ್ನು ಖಂಡಿಸಿದ್ದರು.
ಸ್ವಾಮೀಜಿಯವರು ರಾಜಕೀಯ ಪ್ರತಿಕ್ರಿಯೆ ನೀಡಿದ್ದಕ್ಕೆ ಕೆಲ ವಲಯದಿಂದ ವಿರೋಧ ವ್ಯಕ್ತವಾಗಿದ್ದು, ಸ್ವಾಮೀಜಿ ಬಿಜೆಪಿಯನ್ನು ಪ್ರತಿನಿಧಿಸುತ್ತಿದ್ದಾರಾ ಎಂದು ಪ್ರಶ್ನಿಸಿದ್ದರು. ಈ ಕುರಿತಂತೆ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ದಾವಣಗೆರೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬುಧವಾರದಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಠಾಧೀಶರು ಕೂಡ ಈ ದೇಶದ ಪ್ರಜೆಗಳು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಕೂಡ ಮತ ಚಲಾವಣೆ ಮಾಡಿರುತ್ತಾರೆ. ಸಾಮಾನ್ಯ ಪ್ರಜೆಗಳು ರಾಜಕೀಯದ ಬಗ್ಗೆ ಮಾತನಾಡಬಹುದಾದರೆ, ಮಠಾಧೀಶರು ಏಕೆ ಪ್ರತಿಕ್ರಿಯೆ ನೀಡಬಾರದು ಎಂದು ಪ್ರಶ್ನಿಸಿದ್ದಾರೆ.
ಮಠಾಧೀಶರು ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯೆ ನೀಡುವುದು ನನ್ನ ಪ್ರಕಾರ ತಪ್ಪಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.