ಚಿಕ್ಕಮಗಳೂರು: ಆರ್.ಟಿ.ಜಿ.ಎಸ್. ಮೂಲಕ ವೃದ್ಧಾಪ್ಯ ವೇತನವನ್ನು ಫಲಾನುಭವಿಯ ಖಾತೆಗೆ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಅಂಚೆ ಕಚೇರಿ ಮೂಲಕ ಪಿಂಚಣಿ ಹಣ ಸರಿಯಾಗಿ ತಲುಪುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಅಂಚೆ ಕಚೇರಿಗೆ ಫಲಾನುಭವಿಗಳು ಅಲೆಯುವುದನ್ನು ತಪ್ಪಿಸಲು ಫಲಾನುಭವಿಯ ಖಾತೆಗೆ ಆರ್.ಟಿ.ಜಿ.ಎಸ್. ಮೂಲಕ ನೇರವಾಗಿ ಪಿಂಚಣಿ ಹಣ ಜಮಾ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬಿಪಿಎಲ್ ಪಡಿತರ ಚೀಟಿ ಹೊಂದಿರುವ 60 ವರ್ಷ ಮೇಲ್ಪಟ್ಟವರ ಆಧಾರ್ ದಾಖಲೆ ಆಧರಿಸಿ ಮನೆಬಾಗಿಲಿಗೆ ಪಿಂಚಣಿ ತಲುಪಿಸುವ ಆದೇಶ ನೀಡಲಾಗುವುದು. ಫಲಾನುಭವಿಗಳು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಅವರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. ಜನವರಿ 27 ರಂದು ಈ ಹೊಸ ಪ್ರಯೋಗಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.