ಬೆಂಗಳೂರು: ವಿಧವಾ ವೇತನ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಕಲಚೇತನರ ಪಿಂಚಣಿಯನ್ನು 72 ಗಂಟೆಯೊಳಗೆ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿಗೆ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಮುನಿರಾಜು ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಫಲಾನುಭವಿಗಳು ಪಿಂಚಣಿ ಪಡೆಯಲು ಆರು ತಿಂಗಳು ಅಲೆದಾಡುವ ಸ್ಥಿತಿ ಇತ್ತು. ಇದನ್ನು ತಪ್ಪಿಸಿ ‘ಹಲೋ ಕಂದಾಯ ಸಚಿವರೇ’ ನಿಯಂತ್ರಣ ಕೊಠಡಿ ಸ್ಥಾಪಿಸಲಾಗುವುದು. ರಾಜ್ಯದ ಯಾವುದೇ ಮೂಲೆಯಿಂದ ಕರೆ ಮಾಡಬಹುದಾಗಿದ್ದು, 72 ಗಂಟೆಯೊಳಗೆ ಫಲಾನುಭವಿಗಳ ಮನೆ ಬಾಗಿಲಿಗೆ ಪಿಂಚಣಿ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.
ಜಿಲ್ಲಾಧಿಕಾರಿ ಕಚೇರಿಗಳಲ್ಲಿ ಪಿಂಚಣಿ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವವರ ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್ ದಾಖಲಾತಿಗಳು ಲಭ್ಯವಿದೆ. ಅದನ್ನು ಆಧರಿಸಿ ಮನೆಬಾಗಿಲಿಗೆ ಪಿಂಚಣಿ ತಲುಪಿಸಲಾಗುವುದು ಎಂದು ತಿಳಿಸಿದ್ದಾರೆ.