alex Certify ಪೆಟ್ರೋಲ್-ಡೀಸೆಲ್ ದರ ಏರಿಕೆ: ದಕ್ಷಿಣ ಭಾರತದ ಇತರ ರಾಜ್ಯಕ್ಕಿಂತ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ; ಸಿಎಂ ಸಮರ್ಥನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್-ಡೀಸೆಲ್ ದರ ಏರಿಕೆ: ದಕ್ಷಿಣ ಭಾರತದ ಇತರ ರಾಜ್ಯಕ್ಕಿಂತ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ; ಸಿಎಂ ಸಮರ್ಥನೆ

ಬೆಂಗಳೂರು: ರಾಜ್ಯದಲ್ಲಿ ತೈಲ ದರ ಏರಿಕೆ ವಿಚರವಾಗಿ ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪಾನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲೆ ಮೌಲ್ಯವರ್ಧಿತ ತೆರಿಗೆ ( ವ್ಯಾಟ್ ) 25% ಜೊತೆಗೆ ಹೆಚ್ಚುವರಿ ತೆರಿಗೆ ರೂ. 5.12 ಇದೆ. ಹಾಗೂ ಡೀಸೆಲ್‌ ಮೇಲೆ 21% ಇದೆ. ಇದಕ್ಕೆ ಹೋಲಿಸಿದರೆ ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ.

ಮೌಲ್ಯವರ್ಧಿತ ತೆರಿಗೆ ಹೆಚ್ಚಳದ ಹೊರತಾಗಿಯೂ, ರಾಜ್ಯದಲ್ಲಿ ಡೀಸೆಲ್‌ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ. ಪೆಟ್ರೋಲಿಯಂ ಉತ್ಪನ್ನಗಳ ದರವು ಜನರಿಗೆ ಹೊರೆಯಾಗದ ರೀತಿಯಲ್ಲಿ ಲಭ್ಯವಾಗಿಸಲು ನಾವು ಬದ್ಧರಿದ್ದೇವೆ ಎಂದಿದ್ದಾರೆ.

ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಂಪನ್ಮೂಲಗಳನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯದ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮೌಲ್ಯವರ್ಧಿತ ತೆರಿಗೆ ದರವನ್ನು ಕಡಿತಗೊಳಿಸುವಂತೆ ಮಾಡಿ, ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡುವ ಮೂಲಕ ಲಕ್ಷಾಂತರ ಕೋಟಿ ಸಂಗ್ರಹಿಸಿತ್ತು.

ಈ ಅನರ್ಥ ನೀತಿಯಿಂದಾಗಿ ರಾಜ್ಯದ ರಾಜಸ್ವ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ, ಇದೇ ವೇಳೆ ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸಿತ್ತು.

ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ರೂ. 9.21 ರಿಂದ ರೂ. 32.98 ಗೆ ಹಾಗೂ ಡೀಸೆಲ್‌ ಮೇಲೆ ರೂ. 3.45 ರಿಂದ ರೂ. 31.84 ಕ್ಕೆ ಹೆಚ್ಚಳ ಮಾಡಿತ್ತು. ಇದು ನಿಜವಾಗಿಯೂ ಜನರ ಮೇಲಿನ ಹೊರೆ.

ಆಗಾಗ್ಗೆ ಕೇಂದ್ರ ಸರ್ಕಾರವು ತೆರಿಗೆ ಕಡಿತಗೊಳಿಸಿದ ಹೊರತಾಗಿಯೂ ಈಗಿನ ಅಬಕಾರಿ ಸುಂಕವು ಪೆಟ್ರೋಲ್ ಮೇಲೆ ರೂ. 19.9 ಹಾಗೂ ಡೀಸೆಲ್‌ ಮೇಲೆ ರೂ. 15.8 ಇದೆ. ನರೇಂದ್ರ ಮೋದಿ ಅವರ ಸರ್ಕಾರ ಜನಹಿತದ ದೃಷ್ಟಿಯಿಂದ ಈ ತೆರಿಗೆಯನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ.

ರಾಜ್ಯ ಸರ್ಕಾರದ ಮೌಲ್ಯವರ್ಧಿತ ತೆರಿಗೆಯಲ್ಲಾದ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಸಲ್ಪಡುತ್ತದೆ ಎಂಬ ಗ್ಯಾರಂಟಿಯನ್ನು ನಾನು ನೀಡುತ್ತೇನೆ. ನಾವು ಸರ್ವರ ಹಿತಕಾಯಲು ಮತ್ತು ಜವಾಬ್ದಾರಿಯುತ ಸರ್ಕಾರವಾಗಿ ಮುನ್ನಡೆಯಲು ಬದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...