ಬೆಂಗಳೂರು: ರಾಜ್ಯದಲ್ಲಿ 438 ‘ನಮ್ಮ ಕ್ಲಿನಿಕ್’ ಗಳನ್ನು ಈ ತಿಂಗಳಾಂತ್ಯದಲ್ಲಿ ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಸಿ.ಎನ್. ಮಂಜೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಬಿಎಂಪಿಯಲ್ಲಿ 243, ಉಳಿದೆಡೆ 195 ಕ್ಲಿನಿಕ್ ಗಳನ್ನು ತೆರೆಯಲಾಗುತ್ತಿದ್ದು, 12 ಸೇವೆಗಳು ಈ ಕ್ಲಿನಿಕ್ ಗಳಲ್ಲಿ ಲಭ್ಯವಿರುತ್ತವೆ. ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಕಾತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬಾರ್ ಅವರ ಪ್ರಶ್ನೆಗೆ ಸಚಿವರು, ರಾಜ್ಯದಲ್ಲಿರುವ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದ್ದು. ಇವು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಕಳೆದ ಒಂದೂವರೆ ವರ್ಷದಲ್ಲಿ 2000 ವೈದ್ಯರ ನೇಮಕ ಮಾಡಿಕೊಂಡಿದ್ದು ಗ್ರಾಮೀಣ ಸೇವೆ ಕಡ್ಡಾಯಗೊಳಿಸಲಾಗಿದೆ. 3000 ಎಂಬಿಬಿಎಸ್, 1000 ತಜ್ಞ ವೈದ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.