ಮಧ್ಯಪ್ರದೇಶದ ಗುನಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ಫೋಟೋಗಳು ಗುರುವಾರ ಸ್ಥಳೀಯ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದ್ದು, ರಾಜ್ಯ ಪಂಚಾಯತ್ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ಅವರು ತನಿಖೆಗೆ ಆದೇಶಿಸಿದ್ದಾರೆ.
ಜಿಲ್ಲೆಯ ಚಕ್ ದೇವ್ ಪುರ ಗ್ರಾಮದಲ್ಲಿರುವ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಯಲ್ಲಿ ಸಮವಸ್ತ್ರದಲ್ಲಿರುವ ಬಾಲಕಿಯರು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ಫೋಟೋಗಳು ಮಾಧ್ಯಮಗಳಲ್ಲಿ ಭಿತ್ತರವಾಗಿ ಘಟನೆ ಬೆಳಕಿಗೆ ಬಂದಿದೆ. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ, ಸಚಿವ ಸಿಸೋಡಿಯಾ ಅವರು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗುನಾ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ವಿದ್ಯಾರ್ಥಿನಿಯರು ಕೈಯಲ್ಲಿ ಪೊರಕೆ ಹಿಡಿದುಕೊಂಡು ಶಾಲೆಯ ಆವರಣದಲ್ಲಿರುವ ಹ್ಯಾಂಡ್ ಪಂಪ್ ನಿಂದ ನೀರು ತರುವ ಮೂಲಕ ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲು ಶಾಲಾ ಶಿಕ್ಷಣ ಇಲಾಖೆಯ ತಂಡವೂ ಗುರುವಾರ ಶಾಲೆಗೆ ಭೇಟಿ ನೀಡಿದೆ.
ಮಂಗಳವಾರ ಶಾಲೆಯ ಪ್ರಾಂಶುಪಾಲರು ಅಧಿಕೃತ ಸಭೆಗೆ ಹಾಜರಾಗಲು ಗುನಾ ಪಟ್ಟಣಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ನಾವು ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ತನಿಖೆ ಮಾಡುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಶೇಖರ್ ಸಿಸೋಡಿಯಾ ಹೇಳಿದ್ದಾರೆ.