ಬೆಂಗಳೂರು: ಪ್ರೊ. ಎಲ್.ಆರ್. ವೈದ್ಯನಾಥ್ ವರದಿ ಅನ್ವಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸಿ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಬೇಕು. ಶಿಕ್ಷಕರಿಗೆ ಸಿಗುವಂತೆ ಎಲ್ಲಾ ಸೌಲಭ್ಯಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಆಗಸ್ಟ್ 29ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಪ್ರತಿಭಟನೆ ಕೈಗೊಂಡಿದ್ದಾರೆ.
ಕಳೆದ 17 ವರ್ಷಗಳಿಂದ ಬೇಡಿಕೆ ಈಡೇರಿಸಿಲ್ಲ. ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಇಲಾಖೆ ಪರಿಗಣಿಸಿಲ್ಲ. ಇದುವರೆಗೂ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ಸೇರಿದಂತೆ ಸಹ ಶಿಕ್ಷಕರಿಗೆ ಸಿಗುವ ಸೌಲಭ್ಯಗಳನ್ನು ದೈಹಿಕ ಶಿಕ್ಷಣ ಶಿಕ್ಷಕರಿಗೆ ನೀಡುವ ಇಲಾಖೆ ಆದೇಶ ಅನುಷ್ಠಾನವಾಗಿಲ್ಲ ಎಂದು ಹೇಳಲಾಗಿದೆ.
ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಅಧ್ಯಕ್ಷ ಎಸ್. ಚೌಡಪ್ಪ ಅಸಮಾಧಾನ ವ್ಯಕ್ತಪಡಿಸಿದ್ದು, ಸಮಾನ ವೇತನ, ಸಮಾನ ವಿದ್ಯಾರ್ಹತೆ, ಒಂದೇ ನೇಮಕಾತಿ ವಿಧಾನವಿದ್ದರೂ ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರಲ್ಲಿ ತಾರತಮ್ಯ ಧೋರಣೆ ಮಾಡಲಾಗುತ್ತಿದೆ. ಕೆಲವು ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮಟ್ಟದಲ್ಲಿ ಆದೇಶವಾಗಿದ್ದರೂ ವಿಳಂಬ ಅನುಸರಿಸಲಾಗುತ್ತಿದೆ ಎಂದು ದೂರಿದ್ದಾರೆ.