ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ ಫಿಟ್ ಇಂಡಿಯಾ’ ಕಾರ್ಯಕ್ರಮ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ಕುರಿತು ಸಮಗ್ರ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ‘ ಫಿಟ್ ಇಂಡಿಯಾ ಕಾರ್ಯಕ್ರಮವು ರಾಷ್ಟ್ರವ್ಯಾಪಿ ಆಂದೋಲನವಾಗಿದ್ದು, ವಿದ್ಯಾರ್ಥಿಗಳು ದೈಹಿಕ ಚಟುವಟಿಕೆಗಳಲ್ಲಿ ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವುದರ ಮೂಲಕ ಆರೋಗ್ಯಕರ ಮತ್ತು ಸದೃಢವಾಗಿರುವಂತೆ ಪ್ರೋತ್ಸಾಹಿಸುವ ಉದ್ದೇಶ ಹೊಂದಿದೆ. ಸದರಿ ಕಾರ್ಯಕ್ರಮದಲ್ಲಿ ರಾಜ್ಯದ ಶಾಲೆಗಳ ಎಲ್ಲಾ ವಿದ್ಯಾರ್ಥಿಗಳನ್ನು ಕ್ರೀಡೆ ಮತ್ತು ದೈಹಿಕ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡಿ, ಅವರನ್ನು ದೈಹಿಕ ಮತ್ತು ಮಾನಸಿಕವಾಗಿ ಸದೃಢಗೊಳಿಸುವುದಾಗಿದೆ.
ಈ ಕಾರ್ಯಕ್ರಮವು ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಮಂತ್ರಾಲಯದಡಿಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ದಿನಾಂಕ:15.11.2023 ರಿಂದ 15.12.2023 ರವರೆಗೆ ಹಮ್ಮಿಕೊಳ್ಳಬೇಕಾಗಿದೆ.
ಈ ಕುರಿತಂತೆ ಕೆಳಗಿನ ಮಾರ್ಗಸೂಚಿಗಳ ಪ್ರಕಾರ ಕ್ರಮ ಕೈಗೊಳ್ಳುವುದು.
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳು ದಿನಾಂಕ:15,12,2023 ರೊಳಗೆ ಫಿಟ್ ಇಂಡಿಯಾ ಶಾಲಾ ಸಪ್ತಾಹವನ್ನು (14 ರಿಂದ 6 ದಿನಗಳು ಕಡ್ಡಾಯವಾಗಿ ಹಮ್ಮಿಕೊಳ್ಳುವುದು, ಈ ಜ್ಞಾಪನದೊಂದಿಗೆ ನೋಂದಣಿಯ ಪ್ರಕ್ರಿಯೆ ಬಗ್ಗೆ ಎಂ.ಸಿ.ಐ ನ ಜ್ಞಾಪನ ಲಗತ್ತಿಸಿದೆ.
ಕಾರ್ಯಕ್ರಮದ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲಾ ಉಪನಿರ್ದೇಶಕರು (ಆಡಳಿತ) ರವರು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳನ್ನು ಜಿಲ್ಲಾ ನೋಡಲ್ ಅಧಿಕಾರಿಯಾಗಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳನ್ನು ತಾಲ್ಲೂಕು ನೋಡಲ್ ಅಧಿಕಾರಿಯಾಗಿ ನೇಮಿಸುವುದು.
ಉಪನಿರ್ದೇಶಕರು (ಆಡಳಿತ) ಅವರು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳೊಂದಿಗೆ ಕಾರ್ಯಕ್ರಮದ ವಿವರ ಮತ್ತು ಅನುಷ್ಠಾನ ಕುರಿತಂತೆ ತಮ್ಮ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳ ಸಭೆ ಆಯೋಜಿಸಿ, ಮಾಹಿತಿ ಪಡೆದು ರಾಜ್ಯ ಕಚೇರಿಗೆ ನೀಡುವುದು.
ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯ ಶಿಕ್ಷಕರ ಸಭೆ ಕರೆದು ಕಾರ್ಯಕ್ರಮ ಅನುಷ್ಠಾನ ಕುರಿತು ಕ್ರಮ ಕೈಗೊಳ್ಳುವಂತೆ ಸೂಚಿಸುವುದು ಎಂದು ಪ್ರಕಟಣೆ ಹೊರಡಿಸಿದ್ದಾರೆ.