ಬೆಂಗಳೂರು: ಏಪ್ರಿಲ್ 20 ನಾಮಪತ್ರ ಸಲ್ಲಿಕೆ ಕೊನೆ ದಿನವಾಗಿದ್ದು, ನಾಮಪತ್ರ ಸಲ್ಲಿಕೆ ಕಾರ್ಯ ಪೂರ್ಣವಾಗುತ್ತಿದ್ದಂತೆ ರಾಜ್ಯದಲ್ಲಿ ಬಿಜೆಪಿ ಅಲೆ ಎಬ್ಬಿಸಲು ಕಾರ್ಯತಂತ್ರ ರೂಪಿಸಲಾಗಿದೆ. ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ, ಯೋಗಿ ಆದಿತ್ಯನಾಥ್ ಅವರನ್ನು ಕರೆತರಲು ಚಿಂತನೆ ನಡೆದಿದೆ.
ಈಗಾಗಲೇ ಅನೇಕ ಬಾರಿ ರಾಜ್ಯ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ರಾಜ್ಯದಲ್ಲಿ ಐದಾರು ದಿನಗಳ ಕಾಲ ಬಿರುಗಾಳಿ ಪ್ರಚಾರ ನಡೆಸಲಿದ್ದಾರೆ. ಪ್ರತಿದಿನ ಮೂರ್ನಾಲ್ಕು ಕಡೆ ಸಮಾವೇಶ, ರೋಡ್ ಶೋ ನಡೆಸಲು ವೇಳಾಪಟ್ಟಿ ಸಿದ್ದಪಡಿಸಲಾಗುತ್ತಿದೆ. ರಾಜ್ಯದ ಎಲ್ಲಾ ಭಾಗದಲ್ಲಿಯೂ ಮೋದಿ ಪ್ರಚಾರ ಕೈಗೊಳ್ಳಲಿದ್ದಾರೆ. ಅವರೊಂದಿಗೆ ಅಮಿತ್ ಶಾ, ಯೋಗಿ ಆದಿತ್ಯನಾಥ್, ಜೆ.ಪಿ. ನಡ್ಡಾ, ರಾಜನಾಥ್ ಸಿಂಗ್ ಸೇರಿದಂತೆ ಘಟಾನುಘಟಿ ನಾಯಕರು ಪ್ರಚಾರ ಕೈಗೊಳ್ಳಲಿದ್ದಾರೆ.
ಮೇ ಮೊದಲವಾರ ಕರಾವಳಿ ಜಿಲ್ಲೆಗಳಲ್ಲಿ ಮೋದಿ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಯೋಗಿ ಆದಿತ್ಯನಾಥ್ ಕುಂದಾಪುರ ಮತ್ತು ಬೈಂದೂರು ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳುವ ನೀರಿಕ್ಷೆ ಇದೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಲು ಅನುಕೂಲವಾಗುವಂತೆ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಬಾರಿ ದಾಖಲೆ ಸಂಖ್ಯೆಯಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಿರುವ ಬಿಜೆಪಿ ಕೈಗೊಂಡ ಪ್ರಯೋಗ ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಬಿರುಗಾಳಿ ಪ್ರಚಾರದೊಂದಿಗೆ ಬಿಜೆಪಿ ಅಲೆ ಎಬ್ಬಿಸಲು ಕಾರ್ಯತಂತ್ರ ರೂಪಿಸಲಾಗಿದೆ. 18 ದಿನಗಳಲ್ಲಿ 25 ಕ್ಕೂ ಅಧಿಕ ರ್ಯಾಲಿ ನಡೆಸಲು ಪ್ಲಾನ್ ಮಾಡಲಾಗಿದೆ ಎಂದು ಹೇಳಲಾಗಿದೆ.