ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪಶ್ಚಿಮ ಬಂಗಾಳದಲ್ಲಿ 15,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ್ಲಾರೆ. ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಮೋದಿ ಶುಕ್ರವಾರ ಪಶ್ಚಿಮ ಬಂಗಾಳಕ್ಕೆ ಆಗಮಿಸಿದ್ದಾರೆ.
ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ, ತಮ್ಮ ಸರ್ಕಾರವು ಬಂಗಾಳವನ್ನು ಸ್ವಾವಲಂಬಿ ಮತ್ತು ಅಭಿವೃದ್ಧಿ ಹೊಂದುವಂತೆ ಮಾಡುವಲ್ಲಿ ನಿರತವಾಗಿದೆ ಮತ್ತು ಅದೇ ದೃಷ್ಟಿಕೋನದ ಅಡಿಯಲ್ಲಿ, ಬಂಗಾಳದಲ್ಲಿ ಮೂಲಸೌಕರ್ಯ ಯೋಜನೆಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದರು.
ಉಷ್ಣ ವಿದ್ಯುತ್ ಸ್ಥಾವರಕ್ಕೆ ಶಂಕುಸ್ಥಾಪನೆ
ಪುರುಲಿಯಾ ಜಿಲ್ಲೆಯ ದಾಮೋದರ್ ವ್ಯಾಲಿ ಕಾರ್ಪೊರೇಷನ್ ನ ರಘುನಾಥಪುರ ಉಷ್ಣ ವಿದ್ಯುತ್ ಸ್ಥಾವರದ ಎರಡನೇ ಹಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸಿದರು.
ಮೆಜಿಯಾ ಥರ್ಮಲ್ ಪವರ್ ಸ್ಟೇಷನ್ ನಲ್ಲಿ 650 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾದ ಫ್ಲೂ ಗ್ಯಾಸ್ ಡಿಸಲ್ಫರೈಸೇಶನ್ ಸಿಸ್ಟಮ್ ಅನ್ನು ಪ್ರಧಾನಿ ಉದ್ಘಾಟಿಸಿದರು. ಶುಕ್ರವಾರ ಪ್ರಧಾನಮಂತ್ರಿಯವರು ಬಂಗಾಳದ ಹೂಗ್ಲಿ ಜಿಲ್ಲೆಯ ಅರಂಬಾಗ್ ನಲ್ಲಿ 7200 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಿಯವರ ಭೇಟಿಯ ದೃಷ್ಟಿಯಿಂದ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.