
ಮಂಗಳೂರು: ಪ್ರಧಾನಿ ಮೋದಿ ಇಂದು ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. 3800 ಕೋಟಿ ರೂ. ಮೊತ್ತದ ಯೋಜನೆಗಳನ್ನು ದೇಶಕ್ಕೆ ಅರ್ಪಣೆ ಮಾಡಲಿದ್ದು, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಯೋಜನೆಗಳ ಒಂದು ಲಕ್ಷ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ನವಮಂಗಳೂರು ಬಂದರು ಪ್ರಾಧಿಕಾರ, ಒ.ಎಂ.ಆರ್.ಸಿ.ಎಲ್.ನ 3800 ಕೋಟಿ ರೂ.ಗಳ 8 ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾಲನ್ಯಾಸ ನೆರವೇರಿಸುವರು.
ಮಂಗಳೂರು ಹೊರವಲಯದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ. 2 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಸಮಾವೇಶದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸರ್ಬಾನಂದ ಸೋನೊವಾಲ್, ಶಾಂತನು ಠಾಕೂರ್, ಶೋಭಾ ಕರಂದ್ಲಾಜೆ, ರಾಜ್ಯ ಸಚಿವ ವಿ. ಸುನಿಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.