
ನವದೆಹಲಿ: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.
ಹಿರಿಯ ಅಧಿಕಾರಿಗಳು, ತಜ್ಞರ ಜೊತೆಗೆ ಪ್ರಧಾನಿ ಚರ್ಚೆ ನಡೆಸಲಿದ್ದಾರೆ. ದೇಶದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜೊತೆಗೆ ಅವರು ಸಮಾಲೋಚನೆ ನಡೆಸಲಿದ್ದಾರೆ.
ದೇಶದಲ್ಲಿ ಕೊರೋನಾ ವೈರಸ್ ಓಮಿಕ್ರಾನ್ ಉಪ ತಳಿ ಬಿಎಫ್.7 ಸೋಂಕಿನ ನಾಲ್ಕು ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರೆಲ್ಲರೂ ಗುಣಮುಖರಾಗಿದ್ದಾರೆ.
ಚೀನಾ, ಜಪಾನ್ ಮೊದಲಾದ ದೇಶಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಸೇರಿದಂತೆ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಜ್ಞರು ಸಲಹೆ ನೀಡಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಉನ್ನತ ಅಧಿಕಾರಿಗಳು, ತಜ್ಞರ ಸಭೆಯಲ್ಲಿ ಪರಿಸ್ಥಿತಿ ಅವಲೋಕಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಚರ್ಚಿಸಲಾಗಿದೆ. ಇದರ ಮುಂದುವರೆದ ಭಾಗವಾಗಿ ಇಂದು ಮಹತ್ವದ ಸಭೆ ನಡೆಸಲಿದ್ದು, ಜಾತ್ರೆ, ಹಬ್ಬ, ಸಮಾವೇಶ ಮೊದಲಾದ ಕಡೆಗಳಲ್ಲಿ ಎಂತಹದೇ ಪರಿಸ್ಥಿತಿ ಎದುರಾದರೂ ಎದುರಿಸಲು ಸಜ್ಜಾಗಿರಬೇಕು. ಹೊಸ ತಳಿಯ ಬಗ್ಗೆ ಜಾಗೃತರಾಗಿರಬೇಕು. ಪ್ರತಿದಿನವೂ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಬೇಕು ಎಂದು ರಾಜ್ಯ ಹಾಗೂ ಕೇಂದ್ರ ಆಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಲಾಗಿದೆ.