ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡುತ್ತದೆ ಎಂದು ಪ್ರಚೋದನಕಾರಿ ಮತ್ತು ದ್ವೇಷಪೂರಿತ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.
ಬೆಂಗಳೂರಿನ ಜಿಯಾವುರ್ ರೆಹಮಾನ್ ನೊಮಾನಿ ಎಂಬುವರು ನಗರದ 42ನೇ ಹೆಚ್ಚುವರಿ ಮೆಟ್ರೋ ಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರ ಭಾಷಣ ಮುಸ್ಲಿಮರನ್ನು ನಿಂದಿಸುವ ಈ ದೇಶದ ಸಂಪತ್ತನ್ನು ಲೂಟಿ ಹೊಡೆದ ನುಸುಳುಕೋರರಿಗೆ ಇಲ್ಲಿರುವ ಮುಸ್ಲಿಮರನ್ನು ಹೋಲಿಕೆ ಮಾಡುವಂತಿದೆ. ಆ ಮೂಲಕ ದ್ವೇಷ ಹರಡುವ, ಶಾಂತಿ ಭಂಗ ಉಂಟು ಮಾಡಲು ಪ್ರಧಾನಿ ಯತ್ನಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.
ಸಮಾಜ ಮತ್ತು ಧರ್ಮಗಳ ನಡುವೆ ದ್ವೇಷ ಬಿತ್ತುವ ಶಾಂತಿ ಭಂಗ ಹಾಗೂ ಕ್ರಿಮಿನಲ್ ಪ್ರಚೋದನೆಯ ಭಾಷಣ ಮಾಡಿರುವ ಆರೋಪದಡಿ ಐಪಿಸಿಯ ವಿವಿಧ ಸೆಕ್ಷನ್ ಗಳ ಅಡಿ ಕೇಸ್ ದಾಖಲಿಸುವಂತೆ ದೂರು ನೀಡಲಾಗಿತ್ತು. ಆದರೆ, ಪ್ರಕರಣ ಚುನಾವಣಾ ಆಯೋಗದ ವ್ಯಾಪ್ತಿಗೆ ಬರಲಿದೆ ಎಂದು ತಿಳಿಸಿ ಅಮೃತಹಳ್ಳಿ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿಲ್ಲ. ಹೀಗಾಗಿ ದೂರು ದಾಖಲಿಸಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.