
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳಿಗೆ ನೀಡಬೇಕಾದ ಹಕ್ಕುಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಮತ್ತು ಅವುಗಳನ್ನು ಪುರಸಭೆಗಳಂತೆ ಪರಿಗಣಿಸುತ್ತಿದ್ದಾರೆ ಎಂದು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರದ ವಿರುದ್ಧ ಕೇರಳ ಮುಖ್ಯಮಂತ್ರಿ ನೇತೃತ್ವದ ಪ್ರತಿಭಟನೆಯ ನಡುವೆ ಸ್ಟಾಲಿನ್ ಹೀಗೆಂದು ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಹಕ್ಕುಗಳಿಗಾಗಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುವ ಪರಿಸ್ಥಿತಿಯ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ವಿ.ಪಿ. ಸಿಂಗ್ ಅವರು ರಾಜ್ಯದ ಹಕ್ಕುಗಳನ್ನು ಎತ್ತಿ ಹಿಡಿದ ಸಂದರ್ಭ ಸ್ಟಾಲಿನ್ ನೆನಪಿಸಿಕೊಂಡಿದ್ದು, ಅವರು ಮುಖ್ಯಮಂತ್ರಿಗಳು ಕುಂದುಕೊರತೆಗಳಿಗಾಗಿ ರಾಷ್ಟ್ರ ರಾಜಧಾನಿಗೆ ಆಗಾಗ್ಗೆ ಹೋಗಬೇಕಾದ ಸನ್ನಿವೇಶಗಳನ್ನು ತಪ್ಪಿಸಿದ್ದರು ಎಂದು ಹೇಳಿದ್ದಾರೆ.
ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳನ್ನು ಮುನ್ಸಿಪಾಲಿಟಿಗಳು ಎಂದು ಪರಿಗಣಿಸುತ್ತಾರೆ. ಅವರು ಪ್ರಧಾನಿಯಾಗುವ ಮೊದಲು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದರೂ ಅವರು ರಾಜ್ಯಗಳು ಅಥವಾ ಮುಖ್ಯಮಂತ್ರಿಗಳನ್ನು ಇಷ್ಟಪಡುವುದಿಲ್ಲ ಎಂದು ದೂರಿದ್ದಾರೆ.
ತಮ್ಮ ಹಕ್ಕುಗಳಿಗಾಗಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಮುಖ್ಯಮಂತ್ರಿಗಳು ದೇಶದ ಭೀಕರ ರಾಜಕೀಯ ಪರಿಸ್ಥಿತಿಯನ್ನು ಪ್ರತಿನಿಧಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಆರ್ಥಿಕ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿದ್ದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂತರ್ ಮಂತರ್‌ನಲ್ಲಿ ನಡೆಸಿದ ಪ್ರತಿಭಟನೆ ಬಗ್ಗೆ ಹೇಳಿದ್ದಾರೆ.