ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಎಂಎಲ್‌ಸಿ ಸಿ.ಟಿ. ರವಿ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪ ಪ್ರಕರಣ ಮತ್ತೊಂದು ತಿರುವು ಪಡೆದಿದೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ- ಪ್ರತ್ಯಾರೋಪಗಳು, ದೂರು -ಪ್ರತಿ ದೂರು ದಾಖಲಾಗುತ್ತಿವೆ. ಇದರ ಮುಂದುವರೆದ ಭಾಗವಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ 13 ಪುಟಗಳ ದೂರನ್ನು ಇ-ಮೇಲ್ ಮೂಲಕ ಸಲ್ಲಿಸಿದ್ದಾರೆ.
ತಮ್ಮ ಬಂಧನದ ವೇಳೆ ಪೊಲೀಸ್ ದೌರ್ಜನ್ಯ ನಡೆದಿದೆ. ಇದರಲ್ಲಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬಸನಗೌಡ ಬಾದರ್ಲಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಅವರ ಪಿಎಗಳು, ಪೊಲೀಸ್ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿ ಪತ್ರ ಬರೆದಿದ್ದಾರೆ.
ಸಿಎಂ ಸಿದ್ದರಾಮಯ್ಯ, ಗೃಹ ಸಚಿವರು, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಹಿಂಸೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.
ನಾನು ಕೊಟ್ಟ ದೂರನ್ನು ಪರಿಗಣಿಸಿಲ್ಲ, ಎಫ್ಐಆರ್ ದಾಖಲಿಸಿಲ್ಲ ಎಂದು ಸಿ.ಟಿ. ರವಿ ಈಗಾಗಲೇ ರಾಜ್ಯಪಾಲರು ಮತ್ತು ಡಿಐಜಿಗೆ ದೂರು ನೀಡಿದ್ದಾರೆ.