
ಬೆಂಗಳೂರು: ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಮತ್ತೆ ಟೋಯಿಂಗ್ ವ್ಯವಸ್ಥೆ ಜಾರಿಗೊಳಿಸುವ ಚಿಂತನೆ ಇದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.
ಕೆಂಗೇರಿ ಉಪನಗರದ ಸುರಾನ ಕಾಲೇಜು ಸಭಾಂಗಣದಲ್ಲಿ ಶನಿವಾರ ಸಂಚಾರ ಪೊಲೀಸರು ಆಯೋಜಿಸಿದ್ದ ಸಂಚಾರ ಸಂಪರ್ಕ ದಿವಸ ಕಾರ್ಯಕ್ರಮದಲ್ಲಿ ಅವರು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಕೆಂಗೇರಿ ವ್ಯಾಪ್ತಿಯಲ್ಲಿ ವಾಹನಗಳ ಓಡಾಟಕ್ಕೆ ತೊಂದರೆಯಾಗುತ್ತಿದ್ದು, ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸುವುದರಿಂದ ತೊಂದರೆಯಾಗಿದೆ. ಎಂದು ಕೆಲವರು ದೂರು ನೀಡಿದರು. ಈ ವೇಳೆ ಪ್ರತಿಕ್ರಿಯೆ ನೀಡಿದ ಆಯುಕ್ತ ದಯಾನಂದ್ ನಗರದಲ್ಲಿ ನಿರ್ಬಂಧಿಸಿರುವ ಟೋಯಿಂಗ್ ವ್ಯವಸ್ಥೆ ಮತ್ತೆ ಆರಂಭಿಸಲು ಚಿಂತನೆ ಇದೆ. ಹಳೆ ಪದ್ಧತಿಯ ಲೋಪದೋಷ ಸರಿಪಡಿಸಿ ಟೋಯಿಂಗ್ ವ್ಯವಸ್ಥೆ ಜಾರಿ ಮಾಡುವ ನಿಟ್ಟಿನಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.