ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ 4,547 ಹುದ್ದೆಗಳಿಗೆ ಮುಂದಿನ ಆರು ತಿಂಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1547 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳು, 3000 ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಡಿಸೆಂಬರ್ ನಲ್ಲಿ 545 ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ನಂತರ 402, ಅದಾದ ನಂತರ 600 ಪೋಲಿಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗುವುದು. ಒಟ್ಟಾರೆ 1547 ಪಿಎಸ್ಐ ಹುದ್ದೆಗಳನ್ನು ಮುಂದಿನ ಆರು ತಿಂಗಳೊಳಗೆ ಭರ್ತಿ ಮಾಡಲಾಗುವುದು ಇದರ ಜೊತೆಗೆ 3000 ಕಾನ್ಸ್ಟೇಬಲ್ ಹುದ್ದೆಗಳ ನೇಮಕ ಪ್ರಕ್ರಿಯೆ ಆದಷ್ಟು ಬೇಗನೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಇಲಾಖೆಗೆ ಇನ್ನೂ 15,000 ಕಾನ್ಸ್ಟೇಬಲ್ ಗಳು ಅಗತ್ಯವಿದ್ದು, ಹಂತ ಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಪೊಲೀಸ್ ಇಲಾಖೆಯಲ್ಲಿ ಪ್ರತಿ ಎರಡು ವರ್ಷಗಳ ನಂತರ ವರ್ಗಾವಣೆ ಮಾಡುವ ಕಾನೂನು ತರಲಾಗುವುದು. ನಿವೃತ್ತ ಪೊಲೀಸ್ ಸಿಬ್ಬಂದಿ ಬದಲಿಗೆ ಹೊಸಬರನ್ನು ನೇಮಕ ಮಾಡಿಕೊಳ್ಳುವಾಗ ಹಣಕಾಸು ಇಲಾಖೆ ಒಪ್ಪಿಗೆ ಅಗತ್ಯವಿಲ್ಲ. ಈ ನಿಟ್ಟಿನಲ್ಲಿಯೂ ಕಾನೂನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.