
ಬೆಂಗಳೂರು: ಅತ್ಯಾಚಾರಕ್ಕೆ ಒಳಗಾಗಿ ದೂರು ನೀಡಲು ಠಾಣೆಗೆ ಬಂದ ಬಾಲಕಿಗೆ ಸಹಾಯ ಮಾಡುವ ನೆಪದಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಲಿಸ್ ಕಾನ್ ಸ್ಟೆಬಲ್ ಸೇರಿ ಇಬ್ಬರನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
17 ವರ್ಷದ ಸಂತ್ರಸ್ತೆಯ ತಾಯಿ ನೀಡಿದ ದೂರು ಆಧರಿಸಿ ಬೊಮ್ಮನಹಳ್ಳಿ ಠಾಣೆ ಕಾನ್ ಸ್ಟೆಬಲ್ ಅರುಣ್ ಹಾಗೂ ಸಂತ್ರಸ್ತೆಯ ಸ್ನೇಹಿತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಾಯಿಯೊಂದಿಗೆ ಸಂತ್ರಸ್ತೆ ನೆಲೆಸಿದ್ದಾಳೆ. ಪಕ್ಕದ ಮನೆ ನಿವಾಸಿ ವಿವಾಹಿತ ವ್ಯಕ್ತಿ ಪರಿಚಿತನಾಗಿದ್ದು, ಪ್ರೀತಿಸಿ ಮದುವೆಯಾಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿ ಹಲ್ಲೆ ಮಾಡಿದ್ದಾನೆ. ಈ ವಿಷಯವನ್ನು ಬಾಲಕಿ ತನ್ನ ತಾಯಿಗೆ ತಿಳಿಸಿದ್ದಳು.
ಪೋಲಿಸ್ ಠಾಣೆಗೆ ಸಂತ್ರಸ್ತೆ ದೂರು ನೀಡಲು ಹೋದಾಗ ಕಾನ್ ಸ್ಟೆಬಲ್ ಅರುಣ್ ಪರಿಚಯಿಸಿಕೊಂಡು ನ್ಯಾಯ ಕೊಡಿಸುವ ಭರವಸೆ ನೀಡಿದ್ದಾನೆ. ಕೆಲಸ ಕೊಡಿಸುವುದಾಗಿ ನಂಬಿಸಿ ಕಳೆದ ಡಿಸೆಂಬರ್ ನಲ್ಲಿ ಬಿಟಿಎಂ ಲೇಔಟ್ ನ ಹೋಟೆಲ್ ರೂಂಗೆ ಆಕೆಯನ್ನು ಕರೆಸಿಕೊಂಡು ಮದ್ಯದಲ್ಲಿ ಅಮಲು ಬರುವ ಪದಾರ್ಥ ಬೆರೆಸಿ ಕುಡಿಸಿ ಅತ್ಯಾಚಾರ ಎಸಗಿದ್ದಾನೆ. ಯಾರಿಗಾದರೂ ವಿಷಯ ತಿಳಿಸಿದರೆ ಖಾಸಗಿ ವಿಡಿಯೋಗಳನ್ನು ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ.
ಆರೋಪಿಗಳ ವಿರುದ್ಧ ಪೋಕ್ಸೋ ಮತ್ತು ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಮೈಕೋ ಲೇಔಟ್ ಪೊಲೀಸರು ಕೃತ್ಯ ನಡೆದ ಸ್ಥಳ ಆಧರಿಸಿ ಬೊಮ್ಮನಹಳ್ಳಿ ಠಾಣೆಗೆ ಪ್ರಕರಣ ವರ್ಗಾಯಿಸಿದ್ದರು. ಇದನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ.