ಉತ್ತರ ಪ್ರದೇಶ ರಾಜಕೀಯದಲ್ಲಿ ಸದ್ಯದಲ್ಲೇ ದೊಡ್ಡ ಭೂಕಂಪ ಸಂಭವಿಸಲಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಮುನ್ಸೂಚನೆ ಎಂಬಂತೆ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಇದು ಬಿರುಗಾಳಿಯನ್ನು ಎಬ್ಬಿಸಿದೆ. ಅಲ್ಲದೆ ಯೋಗಿ ಆದಿತ್ಯನಾಥ್ ರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ವೇದಿಕೆ ಸಜ್ಜಾಗುತ್ತಿದೆಯಾ ಎಂಬ ಪ್ರಶ್ನೆ ಮೂಡಿದೆ.
ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಕೇಶವ್ ಪ್ರಸಾದ್ ಮೌರ್ಯ, “ಸಂಘಟನೆ, ಸರ್ಕಾರಕ್ಕಿಂತಲೂ ದೊಡ್ಡದು. ಎಲ್ಲ ಕಾರ್ಯಕರ್ತರ ನೋವು ನನ್ನ ನೋವೂ ಆಗಿದೆ. ಪಕ್ಷಕ್ಕಿಂತ ದೊಡ್ಡವರು ಯಾರೂ
ಇಲ್ಲ. ಕಾರ್ಯಕರ್ತರೇ ನಮ್ಮ ಹೆಮ್ಮೆ” ಎಂದು ಹೇಳಿಕೊಂಡಿದ್ದು, ಕಾಕಾತಾಳೀಯವೆಂಬಂತೆ ಮಂಗಳವಾರದಂದು ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ಬಳಿಕ ಕೇಶವ್ ಪ್ರಸಾದ್ ಮೌರ್ಯ ಈ ಪೋಸ್ಟ್ ಹಾಕಿದ್ದಾರೆ. ಅಲ್ಲದೆ ಜೆ.ಪಿ. ನಡ್ಡಾ, ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದರ್ ಚೌಧರಿ ಅವರನ್ನು ಸಹ ಇದೇ ಸಂದರ್ಭದಲ್ಲಿ ಭೇಟಿ ಮಾಡಿದ್ದರು.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದ್ದು, ಈ ಕಾರಣಕ್ಕಾಗಿಯೇ ಯೋಗಿ ಆದಿತ್ಯನಾಥ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ ಯೋಗಿ ಆದಿತ್ಯನಾಥ್ ಅವರನ್ನು ಅಷ್ಟು ಸುಲಭವಾಗಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಸಾಧ್ಯವಾಗುತ್ತದಾ ಎಂಬ ಪ್ರಶ್ನೆ ಸಹ ಕೇಳಿ ಬರುತ್ತಿದೆ. ಬಹು ಮುಖ್ಯ ಸಂಗತಿ ಎಂದರೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಉತ್ತರ ಪ್ರದೇಶ ಸಿಎಂ ಸ್ಥಾನದಿಂದ ಯೋಗಿ ಆದಿತ್ಯನಾಥ್ ಅವರನ್ನು ಕೆಳಗಿಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದು, ಅದು ನಿಜವಾಗುತ್ತದಾ ಎಂಬ ಪ್ರಶ್ನೆ ಕೂಡ ಈಗ ರಾಜಕೀಯ ವಲಯದಲ್ಲಿ ಮೂಡಿದೆ.