ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಶಾಸಕರ ಪಕ್ಷಾಂತರ, ರಾಜಕೀಯ ಚಟುವಟಿಕೆಗಳು ಗರಿಗೆದರುವುದು ಸಹಜವಾದರೂ, ರಾಜ್ಯದಲ್ಲಿ ಚುನಾವಣೆ ಇನ್ನು ದೂರವಿರುವಾಗಲೇ ಶಾಸಕರ ವಲಸೆ ಬಗ್ಗೆ ನಾಯಕರಿಂದ ಹೇಳಿಕೆಗಳು ಕೇಳಿ ಬಂದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಆಡಳಿತ ಪಕ್ಷ ಬಿಜೆಪಿಯ ಘಟಾನುಘಟಿ ನಾಯಕರು ಪಕ್ಷಾಂತರ ಮಾಡಿದ್ದಾರೆ. ಇಂತಹದೇ ಬೆಳವಣಿಗೆ ರಾಜ್ಯದಲ್ಲಿಯೂ ಆಗಬಹುದು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಒಂದಷ್ಟು ಸಚಿವರು, ಶಾಸಕರು ಬಿಜೆಪಿಗೆ ರಾಜೀನಾಮೆ ಕೊಟ್ಟು ಹೋಗುತ್ತಾರೆ. ಅವರೆಲ್ಲರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಟಿಕೆಟ್ ಬಗ್ಗೆ ಮಾತನಾಡಿದ್ದಾರೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಅನೇಕ ಶಾಸಕರು ಸಂಪರ್ಕದಲ್ಲಿದ್ದಾರೆ. ಅವರು ಯಾರು ಎಂಬುದನ್ನು ಹೇಳುವುದಿಲ್ಲವೆಂದು ತಿಳಿಸಿದ್ದಾರೆ. ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ, ಬಿಜೆಪಿ, ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಷ್ಟು ಜನ ಸಂಪರ್ಕದಲ್ಲಿದ್ದಾರೆ ಎನ್ನುವುದನ್ನು ಹೇಳುವುದಿಲ್ಲ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಇದೇ ರೀತಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ಮತ್ತು ಇತರೆ ಪಕ್ಷಗಳ ನಾಯಕರು ನಮ್ಮೊಂದಿಗೆ ಸಂಪರ್ಕದಲ್ಲಿರುವ ವಿಚಾರವನ್ನು ಬಹಿರಂಗವಾಗಿ ಮಾತನಾಡಲಾಗುವುದಿಲ್ಲ ಎಂದು ಹೇಳಿದ್ದಾರೆ.
ನಾಯಕರ ಈ ಹೇಳಿಕೆಗಳನ್ನು ಗಮನಿಸಿದಾಗ, ಆಡಳಿತ ಪಕ್ಷ ಬಿಜೆಪಿಯಲ್ಲಿ ಸಂಪುಟ ಪುನಾರಚನೆ ಬಳಿಕ ಅನಿರೀಕ್ಷಿತ ಬೆಳವಣಿಗೆಗಳು ನಡೆಯುವ ಸಾಧ್ಯತೆ ಕೂಡ ಇದೆ. ವಿಧಾನಸಭೆ ಚುನಾವಣೆ ಇನ್ನು ದೂರವಿರುವಾಗಲೇ ಟಿಕೆಟ್ ಗಾಗಿ ಅನ್ಯಪಕ್ಷಗಳ ಶಾಸಕರು ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆಂಬ ಹೇಳಿಕೆಗಳು ಹೊರಬಂದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ ಎನ್ನಲಾಗಿದೆ.