
ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಅವರ ತಾಯಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ದೂರು ದಾಖಲಾಗಿದೆ.
ವಾಟ್ಸಾಪ್ ಗ್ರೂಪ್ ಒಂದರಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ಬಗ್ಗೆ ಆಕ್ಷೇಪಾರ್ಹ ಬರಹ ಪೋಸ್ಟ್ ಮಾಡಿದ ಆರೋಪದ ಮೇಲೆ ಸುರೇಶ್ ರಾಜ್ ಎಂಬುವವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಅವರ ತಾಯಿ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಆಕ್ಷೇಪಾರ್ಹ ಬರಹ ಪೋಸ್ಟ್ ಮಾಡಿದ ಆರೋಪದ ಮೇಲೆ ರಾಘವೇಂದ್ರ ಭಟ್ ಎಂಬುವವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.