ಬೀದರ್: ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ ಜಾನುವಾರುಗಳ ಸಂರಕ್ಷಣೆ ಮತ್ತು ಆರೋಗ್ಯ ಸೇವೆಗೆ 82 ಆಂಬುಲೆನ್ಸ್ ಗಳನ್ನು ಜುಲೈ 19ರಂದು ಲೋಕಾರ್ಪಣೆ ಮಾಡಲಾಗುತ್ತದೆ.
ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಈ ಬಗ್ಗೆ ಮಾಹಿತಿ ನೀಡಿದ್ದು, ರೈತರಿಗೆ, ಜಾನುವಾರು ಸಾಕಾಣಿದಾರರಿಗೆ ಅನುಕೂಲ ಕಲ್ಪಿಸಿಕೊಡಲು ಜಾನುವಾರುಗಳ ಸಂರಕ್ಷಣೆ, ಪಾಲನೆ, ಆರೋಗ್ಯ ರಕ್ಷಣೆಗಾಗಿ ಸುಸಜ್ಜಿತ ವಾಹನಗಳ ಮೂಲಕ ಪಶು ಸಂಜೀವಿನಿ ಯೋಜನೆ ಜಾರಿಗೆ ತರಲಾಗಿದೆ. ಇದರ ಭಾಗವಾಗಿ ಸಂಚಾರಿ ಪಶು ಚಿಕಿತ್ಸಾ ವಾಹನ ಲೋಕಾರ್ಪಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿರುವ ದನ, ಎಮ್ಮೆ, ಕುರಿ, ಮೇಕೆ, ಹಂದಿ ಸೇರಿದಂತೆ ಜಾನುವಾರುಗಳಿಗೆ ಅನುಕೂಲವಾಗುತ್ತದೆ. ಸಂಚಾರಿ ಪಶು ಚಿಕಿತ್ಸಾಲಯ ವಾಹನಗಳ ಮೇಲೆ ನಿಗಾ ವ್ಯವಸ್ಥೆಗಾಗಿ ಪ್ರತ್ಯೇಕ ಕಾಲ್ ಸೆಂಟರ್ ಆರಂಭಿಸಲಾಗಿದೆ. ರೈತರು 1962, 8277100200 ಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಾಗುತ್ತದೆ. ಈ ಚಿಕಿತ್ಸೆ ವಾಹನದಲ್ಲಿ ಪಶು ವೈದ್ಯರು, ಪಶು ಸಹಾಯಕರು, ವಾಹನ ಚಾಲಕ ಕಂ ಡಿ ದರ್ಜೆ ನೌಕರರು ಕಾರ್ಯನಿರ್ವಹಿಸಲಿದ್ದಾರೆ. ದೇಶದಲ್ಲಿಯೇ ಮೊದಲ ಬಾರಿಗೆ ಇಂತಹ ಯೋಜನೆಯನ್ನು ಜಾರಿಗೊಳಿಸಿದ್ದು, ರಾಜ್ಯಕ್ಕೆ 275 ಸಂಚಾರಿ ಪಶು ಚಿಕಿತ್ಸಾ ವಾಹನಗಳನ್ನು ಒದಗಿಸಲಾಗಿದೆ.