ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಹೊರ ಹಾಕುವ ಬಗ್ಗೆ ಇಂದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಸಾರ್ವಜನಿಕ, ರಾಜಕೀಯ ವಲಯದಲ್ಲಿ ಪ್ರಜ್ವಲ್ ರೇವಣ್ಣ ನಡೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜೆಡಿಎಸ್ ಶಾಸಕರು ಕೂಡ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಹಾಲಿ ಸಂಸದರಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಲು ನಿರ್ಧರಿಸಲಾಗಿದ್ದು, ಎಸ್ಐಟಿ ತನಿಖಾ ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲು ಚಿಂತನೆ ನಡೆದಿದೆ.
ತೀವ್ರ ಮುಜುಗರ ಸೃಷ್ಟಿಸಿರುವ ಪ್ರಕರಣದಿಂದ ಅಂತರ ಕಾಯ್ದುಕೊಳ್ಳಲು ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಲು ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ. ಮಂಗಳವಾರ ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ನಿರ್ಧಾರ ಕೈಗೊಂಡ ಬಳಿಕ ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಚಾಟನೆ, ಅಮಾನತು ಮಾಡುವ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು.