ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ, ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಬಂಧಿಸಿದಂತೆ ಪ್ರಜ್ವಲ್ ರೇವಣ್ಣ, ನಿರೀಕ್ಷಣ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ಎರಡು ವಾರಗಳ ಕಾಲ ಅರ್ಜಿ ವಿಚಾರಣೆ ಮುಂದೂಡಿದ್ದಾರೆ.
ಈಗಾಗಲೇ ಪ್ರಜ್ವಲ್ ರೇವಣ್ಣನನ್ನು ಒಂದು ಪ್ರಕರಣದಲ್ಲಿ ಎಸ್ ಐಟಿ ಬಂಧಿಸಿದ್ದು, ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಜೈಲುಸೇರಿದ್ದಾರೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮತ್ತೊಂದು ಪ್ರಕರಣದಲ್ಲಿ ಎಸ್ ಐಟಿ ಬಾಡಿ ವಾರೆಂಟ್ ಪಡೆದು ಕಸ್ಟಡಿಗೆ ಪಡೆದಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಪರಿಗಣಿಸುವಂತೆ ಪ್ರಜ್ವಲ್ ಪರ ವಕೀಲರು ಕೋರ್ಟ್ ಗೆ ಮನವಿ ಮಾಡಿದ್ದಾರೆ.
ಈ ವೇಳೆ ಹೈಕೋರ್ಟ್ ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ, ಅರ್ಜಿ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಎಸ್ ಐಟಿಗೆ ಸೂಚಿಸಿದ್ದಾರೆ. ಇದೇ ವೇಳೆ ಪ್ರಕರಣದ ಬಗ್ಗೆ ತನಿಖೆ ನಡೆಯಲಿ ಶೀಘ್ರ ವಿಚಾರಣೆ ಅಗತ್ಯವಿಲ್ಲ ಎಂದು ಹೇಳಿ ಅರ್ಜಿ ವಿಚಾರಣೆ ಎರಡು ವಾರ ಮುಂದೂಡಿ ಆದೇಶ ಹೊರಡಿಸಿದ್ದಾರೆ.