ಕಲಬುರ್ಗಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹೆಚ್.ಡಿ ರೇವಣ್ಣ ಹಾಗೂ ಎರಡನೇ ಆರೋಪಿ ಪ್ರಜ್ವಲ್ ರೇವಣ್ಣ ಇಬ್ಬರಿಗೂ ನೋಟಿಸ್ ನೀಡಲಾಗಿದೆ. ಇಂದು ಹೆಚ್.ಡಿ.ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಹೆಚ್.ಡಿ.ರೇವಣ್ಣ ಎಸ್ ಐಟಿ ಮುಂದೆ ಇಂದು ಹಾಜರಾಗದಿದ್ದರೆ ಅವರನ್ನು ಬಂಧಿಸಲಾಗುವುದು ಎಂದರು.
ಇನ್ನು ಎರಡನೇ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದು ನಿಜ. ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟೀಸ್ ನೀಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಿಗೂ ನೋಟೀಸ್ ನೀಡಲಾಗಿದೆ. ಆತನಿಗೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದರು.