ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಹಾಸನ, ಹುಬ್ಬಳ್ಳಿ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ವಿವಿಧ ಮಹಿಳಾ ಸಂಘಟನೆಗಳು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ತೀವ್ರಗೊಳಿಸಿವೆ.
ಹಾಸನದ ಹೇಮಾವತಿ ವೃತ್ತದಲ್ಲಿ ನೂರಾರು ಮಹಿಳಾ ಕಾಂಗ್ರೆಸ್ ಕಾರ್ಯರ್ತರು ಧರಣಿ ನಡೆಸುತ್ತಿದ್ದು, ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ.ರೇವಣ್ಣ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಮೊಹಮ್ಮದ್ ನಲಪಾಡ್, ಪ್ರಜ್ವಲ್ ರೇವಣ್ಣನನ್ನು ಮೊದಲು ಉಚ್ಛಾಟನೆ ಮಾಡಬೇಕು. ಮಹಿಳೆಯರ ಮೇಲೆ ದೌರ್ಜನ್ಯವೆಸಗಿ ಈಗ ಅಮೇರಿಕಾದಲ್ಲಿ ಹೋಗಿ ಕುಳಿತಿದ್ದಾನೆ. ಎಲ್ಲೇ ಅಡಗಿ ಕುಳಿತರೂ ಬಿಡುವುದಿಲ್ಲ. ಹಾಸನದಲ್ಲಿ ನೂರಾರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿರುವ ವಿಕೃತ ಕಾಮಿಗೆ ಉಗ್ರ ಶಿಕ್ಷೆಯಾಗಬೇಕು. ಮನೆ ಕೆಲಸದವರ ಮೇಲೂ ಆತ ಅಟ್ಟಹಾಸ ಮೆರೆದಿದ್ದಾನೆ. ಇಂತವರಿಂದ ರಾಜ್ಯದ ಮಹಿಳೆಯರಿಗೆ ರಕ್ಷಣೆ ಇದೆಯೇ? ಪ್ರಜ್ವಲ್ ರೇವಣ್ಣಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕ್ಲಚೇರಿ ಎದುರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರಜ್ವಲ್ ರೇವಣ್ಣಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.