ನವದೆಹಲಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದು, ಸಂತ್ರಸ್ತೆಯರಿಗೆ ರಕ್ಷಣೆ ನೀಡುವಂತೆ ಸೂಚಿಸಿದ್ದಾರೆ.
ಪ್ರಕರಣದ ಆರೋಪಿಗಳು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪ್ರಜ್ವಲ್ ರೇವಣ್ಣ ಬಗ್ಗೆ ಮಾಹಿತಿ ತಿಳಿಸಿದ್ದರು. ಈ ಬಗ್ಗೆ ಪ್ರಧಾನಿ ಮೋದಿ ಗಮನಕ್ಕೂ ತರಲಾಗಿತ್ತು ಎಂಬುದು ಕೇಳಿ ನನಗೆ ಆಘಾತವಾಯಿತು. ಆದಾಗ್ಯೂ ಪ್ರಧಾನಿ ಮೋದಿ ಪ್ರಜ್ವಲ್ ಪರ ಪ್ರಚಾರ ಮಾಡಿದ್ದಾರೆ. ಇದನ್ನು ನೋಡಿ ನನಗೆ ಮತ್ತೊಂದು ಶಾಕ್ ಆಗಿದೆ. ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣನನ್ನು ಭಾರತದಿಂದ ಪಾರಾಗಲು ಅನುವು ಮಾಡಿಕೊಟ್ಟಿದೆ ಎಂದು ಕಿಡಿಕಾರಿದ್ದಾರೆ.
ಹರಿಯಾಣ ಕುಸ್ತಿಪಟುಗಳ ಮೇಲೆ ದೌರ್ಜ್ಯನ್ಯ, ಮಣಿಪುರ ಘಟನೆ ನಡೆದಾಗಲೂ ಪ್ರಧಾನಿ ನರೇಂದ್ರ ಮೋದಿ ಮೌನವಹಿಸಿದ್ದಾರೆ. ತಾಯಂದಿರು, ಸಹೋದರಿಯರ ಪರ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಈ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕಿದೆ ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.