ಮಂಡ್ಯ : ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನಾಗಮಂಗಲ ಪ್ರವೇಶಕ್ಕೆ ಪೊಲೀಸರು ನಿರ್ಬಂಧ ಹೇರಿದ್ದಾರೆ.
ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಹಿನ್ನೆಲೆ ನಾಗಮಂಗಲ ಬೂದಿ ಮುಚ್ಚಿದ ಕೆಂಡದಂತಾಗಿದೆ. ಘಟನೆ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದ ಮುತಾಲಿಕ್ ನಾಗಮಂಗಲಕ್ಕೆ ಇಂದು ಭೇಟಿ ನೀಡುವುದಾಗಿ ಹೇಳಿದ್ದರು. ಈ ಹಿನ್ನೆಲೆ ಪೊಲೀಸರು ಸದ್ಯ ನಾಗಮಂಗಲ ಪ್ರವೇಶಕ್ಕೆ ಪೊಲೀಸರು ನಿರ್ಬಂಧ ಹೇರಿದ್ದಾರೆ.
ಗಣೇಶ ಮೂರ್ತಿ ಮೆರವಣಿಗೆ ವೇಳೆ ಬುಧವಾರ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಮಚ್ಚು, ಲಾಂಗ್ ಗಳನ್ನು ಪ್ರದರ್ಶಿಸಿ ಪೆಟ್ರೋಲ್ ಬಾಂಬ್ ಎಸೆದ ಘಟನೆಯಿಂದ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. 20ಕ್ಕೂ ಅಧಿಕ ಅಂಗಡಿಗಳನ್ನು ಧ್ವಂಸ ಮಾಡಿ ಆರು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು.ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಅಶೋಕ್ ಅವರನ್ನು ಅಮಾನತು ಮಾಡಲಾಗಿದೆ.