ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ನಡೆದ ಬಿಜೆಪಿ ಕಾರ್ಯಕರ್ತರ ಹತ್ಯೆಯಲ್ಲಿಯೂ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿಲ್ಲ. ಕಠಿಣ ಕ್ರಮ ಕೇವಲ ಭರವಸೆಯಾಗಿಯೇ ಉಳಿದಿದೆ ಎಂದು ಪಕ್ಷ ಹಾಗೂ ಸರ್ಕಾರದ ವಿರುದ್ಧ ಕಿಡಿಕಾರಿರುವ ಜಿಲ್ಲೆಗಳ ಮಂಡಲ ಪದಾಧಿಕಾರಿಗಳು ರಾಜೀನಾಮೆ ನೀಡುವ ಮೂಲಕ ಬಿಸಿ ಮುಟ್ಟಿಸಿದ್ದಾರೆ.
ವಿಜಯಪುರ, ಬಾಗಲಕೋಟೆ, ಕೊಪ್ಪಳ ಸೇರಿದಂತೆ ವಿವಿಧ ಭಾಗಗಳಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ವಿಜಯಪುರ ಜಿಲ್ಲೆಯ ಜಿಲ್ಲಾ ಸಾಮಾಜಿಕ ಜಾಲತಾಣ ಹಾಗೂ ಮಾಹಿತಿ ತಂತ್ರಜ್ಞಾನ ಪ್ರಕೋಷ್ಠ ಜಿಲ್ಲಾ ಸಂಚಾಲಕ ಸಂದೀಪ್ ಪಾಟೀಲ್ ನೇತೃತ್ವದಲ್ಲಿ ಸಾಮಾಜಿಕ ಜಾಲತಾಣ ಸಮಿತಿಯ 9 ಮಂಡಲಗಳ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಉಪಾಧ್ಯಕ್ಷ ಆರ್.ಪಾಲಯ್ಯ, ಜಿಲ್ಲಾ ಕಾರ್ಯದರ್ಶಿ ಜ್ಯೋತಿ ಪ್ರಕಾಶ್, ಚಳ್ಳಕೆರೆ ತಾಲೂಕು ಯುವ ಘಟಕ ಅಧ್ಯಕ್ಷ ಎಸ್.ಶಶಿಧರ್ ಹಾಗೂ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ.
ಹುಬ್ಬಳ್ಳಿಯ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸ್ಥಾನಕ್ಕೆ ರೇಖ ಶಂಭು ಪಟೇಲ ರಾಜಿನಾಮೆ ನೀಡಿದ್ದಾರೆ. ಕೊಪ್ಪಳದಲ್ಲಿಯೂ ಬಿಜೆಪಿ ಯುವ ಮೋರ್ಚಾ ಹಾಗು ಮಹಿಳಾ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಈ ಹಿಂದೆ ನಡೆದ ಹಿಂದೂ ಕಾರ್ಯಕರ್ತರ ಹತ್ಯೆ ಆರೋಪಿಗಳಿಗೂ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.