ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ನೀಡಲಾಗಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗಕ್ಕೆ ನೂತನ ಕುಮಾರಿ ನೇಮಕ ಮಾಡಿದ್ದರು. ಮುಖ್ಯಮಂತ್ರಿ ಸಚಿವಾಲಯದಲ್ಲಿ ಮಾನವೀಯ ನೆಲೆಯಲ್ಲಿ ನೂತನ ಕುಮಾರಿಯವರಿಗೆ ಮುಖ್ಯಮಂತ್ರಿಯ ವಿಶೇಷ ಅಧಿಕಾರ ಬಳಸಿ ಗ್ರೂಪ್ ಸಿ ಹಿರಿಯ ಸಹಾಯಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು.
2022ರ ಸೆಪ್ಟೆಂಬರ್ 22 ರಂದು ಗುತ್ತಿಗೆ ಆಧಾರದಲ್ಲಿ ಅವರನ್ನು ಕೆಲಸಕ್ಕೆ ನೇಮಿಸಲಾಗಿದ್ದು, ಈಗ ಕೆಲಸದಿಂದ ಬಿಡುಗಡೆಗೊಳಿಸಿರುವುದಾಗಿ ಆದೇಶ ನೀಡಲಾಗಿದೆ. ನೂತನ ಕುಮಾರಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಶುಕ್ರವಾರದಿಂದ ಜಾರಿಗೆ ಬರುವಂತೆ ಅವರನ್ನು ಕೆಲಸದಿಂದ ತೆಗೆದುಹಾಕಿ ಆದೇಶ ಹೊರಡಿಸಲಾಗಿದೆ. ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಂಡು ಮುಂದುವರೆಸುವ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.