
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಧಿಕ ಸ್ಥಾನ ಗಳಿಸಿದ್ದು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಏರುತ್ತಿದೆ. ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12:30 ಕ್ಕೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪ್ರಮಾಣವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಮಂದಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬೆಂಬಲಿಗರು ಆಗಮಿಸಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಸಿದ್ದರಾಮಯ್ಯ – ಡಿ.ಕೆ. ಶಿವಕುಮಾರ್ ಭಾವಚಿತ್ರ ಇರುವ ಬಾವುಟಗಳನ್ನು ಬೀಸುತ್ತಾ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಕೆಲ ರಾಜ್ಯಗಳ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದು, ಅವರುಗಳಿಗೆ ವೇದಿಕೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದು, ಅವರನ್ನು ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಬರಮಾಡಿಕೊಂಡಿದ್ದಾರೆ.