
ಬೆಂಗಳೂರು: ದೀರ್ಘಾವಧಿಯಿಂದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಬಡವರ ವ್ಯಾಜ್ಯಗಳನ್ನು ಆರು ತಿಂಗಳಲ್ಲಿ ಶೀಘ್ರವಾಗಿ ವಿಲೇವಾರಿ ಮಾಡುವ ಸಿವಿಲ್ ಪ್ರಕ್ರಿಯಾ ಸಂಹಿತಾ(ಕರ್ನಾಟಕ ತಿದ್ದುಪಡಿ) ವಿಧೇಯಕ 2023ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ಶೀಘ್ರವೇ ನ್ಯಾಯ ಸಿಗಲಿದೆ.
ವಿಧಾನ ಪರಿಷತ್ ನಲ್ಲಿ ಸಚಿವ ಹೆಚ್.ಕೆ. ಪಾಟೀಲ್ ಅವರು ಈ ಬಗ್ಗೆ ಹೇಳಿಕೆ ನೀಡಿದ್ದು, ವಿಧಾನ ಮಂಡಲ ಉಭಯ ಸದನಗಳಲ್ಲಿ ಅನುಮೋದನೆಗೊಂಡಿದ್ದ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿಗಳ ಅಂಕಿತಕ್ಕೆ ಕಳಿಸಿದ್ದರು. ಫೆಬ್ರವರಿ 21ರಂದು ರಾಷ್ಟ್ರಪತಿಗಳು ವಿಧೇಯಕಕ್ಕೆ ಸಹಿ ಹಾಕಿದ್ದು, ಇದನ್ನು ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ.
ನ್ಯಾಯಾಲಯಗಳಲ್ಲಿ ವ್ಯಾಜ್ಯದ ವಿರುದ್ಧ ಹೋರಾಡಲು ಬಲವಿಲ್ಲದ ಬಡವರು, ಇತರೆ ವ್ಯಕ್ತಿಗಳನ್ನು ಒಳಗೊಂಡ ಪ್ರಕರಣಗಳನ್ನು ಆರು ತಿಂಗಳಲ್ಲಿ ಇತ್ಯರ್ಥಪಡಿಸಲು ಈ ಕಾಯ್ದೆಯಿಂದ ಅನುಕೂಲವಾಗುತ್ತದೆ. ಇದೊಂದು ಕ್ರಾಂತಿಕಾರಕ ಕಾನೂನು ಆಗಿದ್ದು, ದೇಶದಲ್ಲಿಯೇ ಮೊದಲು ಜಾರಿಗೊಳಿಸಲಾಗುತ್ತಿದೆ. ಇದರಿಂದ ಬಡವರು, ದೀರ್ಘಕಾಲದಿಂದ ನ್ಯಾಯಾಲಯಗಳಲ್ಲಿ ಬಾಕಿ ಇರುವ ವ್ಯಾಜ್ಯದ ವಿರುದ್ಧ ಹೋರಾಡಲು ಶಕ್ತಿ ಇಲ್ಲದವರಿಗೆ ಸೇರಿದ ಪ್ರಕರಣಗಳನ್ನು ಆದ್ಯತೆ ಮೇಲೆ ವಿಲೇವಾರಿ ಮಾಡಲು ಕಾಲಮಿತಿ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.