ನವದೆಹಲಿ: 70 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಉಚಿತ ಚಿಕಿತ್ಸೆ ನೀಡುವ ಯೋಜನೆಗೆ ಪ್ರಧಾನಿ ಮೋದಿ ಅ. 29ರಂದು ಚಾಲನೆ ನೀಡುವ ಸಾಧ್ಯತೆ ಇದೆ.
ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಪುನರಾವರ್ತಿತ ಲಸಿಕೆಗಳ ಎಲೆಕ್ಟ್ರಾನಿಕ್ ನೋಂದಣಿ ಉದ್ದೇಶದಿಂದ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಯು- ವಿನ್ ಪೋರ್ಟಲ್ ಯೋಜನೆ ಸೇರಿದಂತೆ ಅನೇಕ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ಗರ್ಭಿಣಿಯರು ಮತ್ತು ಮಕ್ಕಳಿಗೆ ನೀಡುವ ಲಸಿಕೆಗಳ ಶಾಶ್ವತ ನೋಂದಣಿಗಾಗಿ ಯು-ವಿನ್ ಪೋರ್ಟಲ್ ಸಿದ್ಧಪಡಿಸಲಾಗಿದೆ.
70 ವರ್ಷ ಮೇಲ್ಪಟ್ಟ ಎಲ್ಲರಿಗೂ ಆಯುಷ್ಮಾನ್ ಭಾರತ್ ಯೋಜನೆ ಅಡಿ ವಿಮೆ ಸೌಲಭ್ಯ ಒದಗಿಸಲಿದ್ದು, ಅಂದಾಜು ಆರು ಕೋಟಿ ಜನರಿಗೆ 4.5 ಕೋಟಿ ಕುಟುಂಬಗಳಿಗೆ ನೆರವಾಗಲಿದೆ ಎಂದು ಹೇಳಲಾಗಿದೆ.
ಬಡವರು, ಶ್ರೀಮಂತರು ಎನ್ನುವ ಭೇದವಿಲ್ಲದೆ 70 ವರ್ಷ ಮೇಲ್ಪಟ್ಟ ಎಲ್ಲರೂ ಯೋಜನೆಯ ಫಲಾನುಭವಿ ಆಗಲು ಅರ್ಹರಾಗಿರುತ್ತಾರೆ. ಇವರು ವಾರ್ಷಿಕ 5 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದು. ಪ್ರಸಕ್ತ ವರ್ಷದ ಸೆ. 1ವರೆಗೆ 12,696 ಖಾಸಗಿ ಆಸ್ಪತ್ರೆಗಳು ಸೇರಿದಂತೆ 29,648 ಆಸ್ಪತ್ರೆಗಳನ್ನು ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಸೇರ್ಪಡೆ ಮಾಡಲಾಗಿದೆ.