ವಿಜಯಪುರ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕು ಮನಗೂಳಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲ ಸಚಿನ್ ಕುಮಾರ್ ಪಾಟೀಲ್ ಎಂಬುವರನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ್ ನಿಂಬರಗಿ ತಿಳಿಸಿದ್ದಾರೆ.
ಕಾಲೇಜಿನಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ಈ ಬಗ್ಗೆ ದೂರು ನೀಡಿದ್ದಾರೆ. ಕಳೆದ ಜುಲೈನಲ್ಲಿ ಕೃತ್ಯ ನಡೆದಿದೆ. ಜನವರಿ 2ರಂದು ವಿದ್ಯಾರ್ಥಿನಿಯರು ಮನಗೂಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿದ್ಯಾರ್ಥಿನಿಯರ ಮೈಕೈ ಮುಟ್ಟುವುದು, ಅಪ್ಪಿಕೊಳ್ಳುವುದನ್ನು ಮಾಡುತ್ತಿದ್ದ ಆರೋಪಿ ವಿರೋಧಿಸಿದಾಗ ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಬೆದರಿಸುತ್ತಿದ್ದ ಎನ್ನಲಾಗಿದೆ.
ಈತನ ಕಿರುಕುಳದಿಂದಾಗಿ ವಿದ್ಯಾರ್ಥಿನಿಯೊಬ್ಬಳು ಅರ್ಧಕ್ಕೆ ಕಾಲೇಜು ಬಿಟ್ಟಿದ್ದಳು. ಮೊದಲ ಸೆಮಿಸ್ಟರ್ ಪರೀಕ್ಷೆಯಲ್ಲಿ ಉದ್ದೇಶಪೂರ್ವಕವಾಗಿ ಒಂದು ವಿಷಯದಲ್ಲಿ ಆಕೆಯನ್ನು ಫೇಲ್ ಮಾಡಿದ್ದು, ಈ ಬಗ್ಗೆ ಪ್ರಶ್ನಿಸಿದಾಗ ಸಹಕರಿಸಿದರೆ ಕಾಲೇಜಿಗೆ ಟಾಪರ್ ಮಾಡುತ್ತೇನೆ. ಕೆಲಸ ಕೊಡಿಸಲು ಸಹಾಯ ಮಾಡುತ್ತೇನೆ ಎಂದು ಹೇಳಿದ್ದ. ಆಕೆಗೆ ಮೆಸೇಜ್ ಕೂಡ ಮಾಡುತ್ತಿದ್ದ. ಮತ್ತೊಬ್ಬ ವಿದ್ಯಾರ್ಥಿನಿಯರಿಗೆ ರಾಜ್ಯಮಟ್ಟದ ಪ್ರತಿಭಾ ಕಾರಂಜಿಗೆ ಹೋದಾಗ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ಈ ಬಗ್ಗೆ ನೊಂದ ವಿದ್ಯಾರ್ಥಿನಿಯರು ದೂರು ನೀಡಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.