ಕಲಬುರ್ಗಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ಮಹಿಳಾ ಸಂಘಟನೆಗಳು ಹಾಸನದ ಹೇಮಾವತಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಈ ನಡುವೆ ಕಲಬುರ್ಗಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದೇ ಕೇಂದ್ರ ಬಿಜೆಪಿ ನಾಯಕರು ಎಂದು ಆರೋಪಿಸಿದ್ದಾರೆ.
ಮಹಿಳೆಯರ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಈಗ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಗಳ ಬಗ್ಗೆ ಸ್ಪಷ್ಟೀಕರಣ ನೀಡಬೇಕು. ಇವರೆಲ್ಲ ಮಹಿಳೆಯರ ಮಾನ, ಮರ್ಯಾದೆ ಕಾಪುಡುವವರಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಪ್ರಕರಣದ ಬಗ್ಗೆ ಮಾತನಾಡಿದರು. ಕೆಫೆ ಬಾಂಬ್ ಸ್ಫೋಟದ ಬಗ್ಗೆ ಮಾತನಾಡಿದರು, ಎಲ್ಲಾ ಪ್ರಕರಣಗಳ ಬಗ್ಗೆಯೂ ಮಾತನಾಡಿದರು. ಆದರೆ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಮಾತನಾಡಿಲ್ಲ ಯಾಕೆ? ಹಾಸನದ ಪ್ರಕರಣದ ಬಗ್ಗೆ ಮೋದಿ ಯಾವಾಗ ಮಾತನಾಡುವುದು? ಹಾಸನದ ಪ್ರಕರಣದ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡಲಿ ಎಂದು ಹೇಳಿದರು.