ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಇದೆ. 200ಕ್ಕೂ ಅಧಿಕ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ. ಅನೇಕ ತಾಲೂಕುಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗಿದೆ. 36 ತಾಲ್ಲೂಕುಗಳಲ್ಲಿ 100 ಗ್ರಾಮ ಪಂಚಾಯಿತಿ ವ್ಯಾಪ್ತಿಯ 152 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ ಮಾಹಿತಿ ನೀಡಿರುವ ಸಚಿವರು, 152 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
22 ಗ್ರಾಮಗಳಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಟ್ರಾಂಕರ್, 16 ಗ್ರಾಮಗಳಿಗೆ ಬಾಡಿಗೆ ಆಧಾರದ ಮೇಲೆ ಪಡೆಯಲಾದ ಟ್ಯಾಂಕರ್ ಬಳಸಿ ನೀರು ಪೂರೈಕೆ ಮಾಡಲಾಗುತ್ತಿದೆ. ಪ್ರತಿ ಟ್ಯಾಂಕರ್ ಸರಾಸರಿ ಪ್ರತಿದಿನ 17 ಟ್ರಿಪ್ ಮೂಲಕ ನೀರು ಪೂರೈಕೆ ಮಾಡುತ್ತಿವೆ. 142 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ಅವುಗಳ ಮೂಲಕ 130 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.