ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಯುಟರ್ನ್ ತೆಗೆದುಕೊಂಡಿದ್ದಾರೆ.
ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂಬುದಾಗಿ ಬಿಂಬಿತವಾಗುತ್ತಿದೆ. ಇದರ ಬಗ್ಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದ ಪ್ರಿಯಾಂಕಾ ಗಾಂಧಿ ತಾವೇ ಮುಖ್ಯಮಂತ್ರಿ ಅಭ್ಯರ್ಥಿ ಎನ್ನುವಂತೆ ಪರೋಕ್ಷವಾಗಿ ಹೇಳಿಕೆ ನೀಡಿದ್ದರು.
ಉತ್ತರಪ್ರದೇಶ ಚುನಾವಣೆಗೆ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗುತ್ತಾರೆ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ನನ್ನ ಮುಖ ಕಾಣುತ್ತಿಲ್ಲವೇ ಎಂದು ಪ್ರತ್ಯುತ್ತರ ನೀಡಿದ್ದರು. ಆದರೆ, ಇಂದು ತಮ್ಮ ಹೇಳಿಕೆ ಬದಲಿಸಿದ ಅವರು, ನಾನು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಮುಖ ಎಂದು ಹೇಳುತ್ತಿಲ್ಲ. ಎಲ್ಲರೂ ಒಂದೇ ಪ್ರಶ್ನೆ ಕೇಳಿದಾಗ ಕೋಪದಿಂದ ನನ್ನ ಪ್ರತಿಕ್ರಿಯೆ ಆ ರೀತಿ ಹೊರಬಂದಿದೆ ಎಂದು ತಮ್ಮ ಹೇಳಿಕೆಯನ್ನು ಹಿಂಪಡೆಯುವ ಪ್ರಯತ್ನ ನಡೆಸಿದ್ದಾರೆ.
ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ 403 ಸದಸ್ಯಬಲದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ 7 ಹಂತದಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
ಪ್ರಿಯಾಂಕಾ ಗಾಂಧಿ ಕಳೆದೆರಡು ವರ್ಷಗಳಿಂದಲೂ ಚುನಾವಣೆಗೆ ತಯಾರಿ ನಡೆಸಿದ್ದು, ವ್ಯವಸ್ಥಿತ ಕಾರ್ಯತಂತ್ರದೊಂದಿಗೆ ಮಹಿಳೆಯರು ಮತ್ತು ಯುವಕರಿಗೆ ಆದ್ಯತೆ ನೀಡಿ ಚುನಾವಣೆ ಎದುರಿಸುತ್ತಿದ್ದಾರೆ.