ವಿಜಯಪುರ: ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗಿ ಕಂಡುಬರುತ್ತಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಆಸ್ತಿಯ ಮೂಲ ಮಾಲೀಕರ ಗಮನಕ್ಕೆ ಬಾರದೆ ನಕಲಿ ದಾಖಲೆ ಸೃಷ್ಟಿಸಿ ಒಬ್ಬರ ಆಸ್ತಿಯನ್ನು ಮತ್ತೊಬ್ಬರಿಗೆ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ, ಮಧ್ಯವರ್ತಿಗಳ ಮೂಲಕ ರಾಜೀ ಸಂಧಾನಕ್ಕೆ ಕರೆದು ಅಕ್ರಮವಾಗಿ ಹಣ ಮಾಡುವ ದಂಧೆ ಕಂಡು ಬರುತ್ತಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಡಿಸೆಂಬರ್ 13 ರಂದು ಬೆಳಗಾವಿಯಲ್ಲಿ ನಡೆಯಲಿರುವ ವಿಶೇಷ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ ಅಧಿಕಾರಿಗಳ ಸಭೆ ನಡೆಸಲಾಗಿದೆ. ವಿಜಯಪುರ ನಗರದಲ್ಲಿ ಕಳೆದ ಐದು ವರ್ಷದಲ್ಲಿ ಇಂತಹ 13 ಪ್ರಕರಣಗಳು ಕಂಡು ಬಂದಿವೆ. ರಾಜ್ಯದ ವಿವಿಧೆಡೆಯೂ ಇಂತಹ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸುವ ದಂಧೆಕೋರರ ಜಾಲ ಹರಡಿದೆ. ಇದಕ್ಕೆ ಕಡಿವಾಣ ಹಾಕಲು ತೀರ್ಮಾನ ಕೈಗೊಂಡಿದ್ದು, ಡಿಸೆಂಬರ್ 13 ರಂದು ನಡೆಯುವ ವಿಶೇಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.