ಬೆಂಗಳೂರು: ರಾಜ್ಯಾದ್ಯಂತ ಗುರುವಾರದಿಂದ ಪೂರ್ಣ ಪ್ರಮಾಣದಲ್ಲಿ ಆಸ್ತಿ ನೋಂದಣಿ ಕಾರ್ಯ ಮತ್ತೆ ಆರಂಭವಾಗಲಿದೆ.
ರಾಜ್ಯದಲ್ಲಿ ನಕಲಿ ದಸ್ತಾವೇಜು ನೋಂದಣಿಯಾದಲ್ಲಿ ಸಂಬಂಧಿಸಿದ ಉಪ ನೋಂದಣಾಧಿಕಾರಿಗೆ ಜೈಲು ಶಿಕ್ಷೆ ವಿಧಿಸುವ ಕರ್ನಾಟಕ ನೋಂದಣಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೋಮವಾರದಿಂದ ದಸ್ತಾವೇಜು ನೋಂದಣಿ ಸ್ಥಗಿತಗೊಳಿಸಿದ್ದ ಉಪ ನೋಂದಣಾಧಿಕಾರಿಗಳ ಸಂಘವು ಪ್ರತಿಭಟನೆ ಹಿಂಪಡೆದುಕೊಂಡಿದೆ. ಗುರುವಾರದಿಂದ ಪೂರ್ಣ ಪ್ರಮಾಣದಲ್ಲಿ ನೋಂದಣಿ ಕಾರ್ಯ ನಡೆಸಲಾಗುವುದು ಎಂದು ತಿಳಿಸಿದೆ.
ಕಾಯ್ದೆ ಬಗ್ಗೆ ಉಪ ನೋಂದಣಾಧಿಕಾರಿಗಳಿಗೆ ಉಂಟಾದ ಗೊಂದಲ ಬಗೆಹರಿಯುವವರೆಗೆ, ಈ ಬಗ್ಗೆ ಸ್ಪಷ್ಟ ಮಾರ್ಗಸೂಚಿ ರೂಪಿಸುವವರೆಗೆ ಕಾಯ್ದೆಯನ್ನು ಅನುಷ್ಠಾನ ಮಾಡುವುದಿಲ್ಲ ಎಂದು ನೋಂದಣಿ ಪರಿವೀಕ್ಷಕರು ಹಾಗೂ ಮುದ್ರಾಂಕ ಆಯುಕ್ತರಾದ ಕೆ.ಎ. ದಯಾನಂದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಉಪ ನೋಂದಣಾಧಿಕಾರಿಗಳು ಪ್ರತಿಭಟನೆ ಹಿಂಪಡೆದುಕೊಂಡಿದ್ದು, ಗುರುವಾರದಿಂದ ಪೂರ್ಣ ಪ್ರಮಾಣದಲ್ಲಿ ಸೇವೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಹೀಗಾಗಿ ಇಂದಿನಿಂದ ನೋಂದಣಿ ಕಾರ್ಯ ಮತ್ತೆ ಆರಂಭವಾಗಲಿದೆ ಎಂದು ಹೇಳಲಾಗಿದೆ.