ಬೆಂಗಳೂರು: ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿತರಾದ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳನ್ನು ಸಂತ್ರಸ್ತೆಯ ಖಾಸಗಿತನ ರಕ್ಷಿಸುವ ಉದ್ದೇಶದಿಂದ ರಹಸ್ಯ ವಿಚಾರಣೆ ನಡೆಸುವಂತೆ ಹೈಕೋರ್ಟ್ ಗೆ ರಾಜ್ಯ ಸರ್ಕಾರದಿಂದ ಗುರುವಾರ ಮೌಖಿಕವಾಗಿ ಮನವಿ ಮಾಡಲಾಗಿದೆ.
ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಗಳು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿವೆ. ಸರ್ಕಾರದ ಪರ ಹಾಜರಿದ್ದ ಎಸ್ಪಿಪಿ ಪ್ರೊ. ರವಿವರ್ಮ ಕುಮಾರ್ ಸಂತ್ರಸ್ತೆಯರ ಖಾಸಗಿತನ ರಕ್ಷಿಸುವ ಉದ್ದೇಶದಿಂದ ಆರೋಪಿಯ ಜಾಮೀನು ಅರ್ಜಿಗಳ ಗೌಪ್ಯ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಸಿದ ನ್ಯಾಯಪೀಠ ಈ ಸಂಬಂಧ ಮುಖ್ಯ ನ್ಯಾಯಮೂರ್ತಿಗಳು ಆದೇಶ ಮಾಡಬೇಕಿದ್ದು, ಮುಂದಿನ ವಿಚಾರಣೆಯ ವೇಳೆ ನೋಡೋಣ ಎಂದು ತಿಳಿಸಿ ಸೆಪ್ಟೆಂಬರ್ 5ಕ್ಕೆ ವಿಚಾರಣೆ ಮುಂದೂಡಿದ್ದಾರೆ.