ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿರುವ ಕೆಂದ್ರ ಸರ್ಕಾರದ ವಿರುದ್ಧ ರಾಜ್ಯ ಯುವ ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಿದೆ.
ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರು, ಮೈಸೂರು, ಶಿವಮೊಗ್ಗ, ಚಾಮರಾಜನಗರ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಹಾಗೂ ಬಿಜೆಪಿ ಸಂಸದರ ಕಚೇರಿಗಳಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ತಲೆ ಮೇಲೆ ಅಕ್ಕಿ ಮೂಟೆ ಹೊತ್ತು, ಬೇಕೆ ಬೇಕು ಅಕ್ಕಿ ಬೇಕು ಎಂದು ಘೋಷಣೆ ಕೂಗಿದರು. ಇದೇ ವೇಳೆ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ನಲಪಾಡ್ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದ ಪೊಲೀಸರು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದ ಘಟನೆ ನಡೆದಿದೆ.
ಇದೇ ವೇಳೆ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು 25 ಬಿಜೆಪಿ ಸಂಸದರ ಮುಖವಾಡ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಸಂಸದ ಪ್ರತಾಪ್ ಸಿಂಹ ಕಾರನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆದಿದೆ.