ಮೈಸೂರು : ಮೈಸೂರಿನಲ್ಲಿ ಕೆಎಸ್ ಆರ್ ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂದ್ ದಿನವೇ ಸಂಚರಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಂದ್ ಗೆ ನೀರಸ ಪ್ರಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಬಸ್ ಗಳು ಹಾಗೂ ಆಟೋಗಳು ಸಂಚರಿಸುತ್ತಿದೆ.
ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಹೋರಾಟಗಾರ ವಾಟಾಳ್ ನಾಗರಾಜ್ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಕರ್ನಾಟಕ ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ಘೋಷಿಸಿದ್ದರೆ, ಇನ್ನು ಕೆಲ ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಘೋಷಿಸಿದ್ದಾರೆ.