ಬೆಂಗಳೂರು: ಅಕ್ರಮ ಆರೋಪದ ಹಿನ್ನೆಲೆಯಲ್ಲಿ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯವರು ಈ ಕುರಿತಾಗಿ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತುರ್ತು ಸಂದೇಶ ಕಳುಹಿಸಿದ್ದಾರೆ.
ಈಗಾಗಲೇ ಸಿವಿಲ್ ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಂಡು, ಘಟಕವಾರು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಮೆಡಿಕಲ್ ಟೆಸ್ಟ್, ದಾಖಲೆ ಪರಿಶೀಲನೆ ಕಾರ್ಯ ಕೈಗೊಳ್ಳಲು ಜನವರಿ 21ರಂದು ಸೂಚನೆ ನೀಡಲಾಗಿದೆ. ಈಗ ಆಡಳಿತಾತ್ಮಕ ಕಾರಣದಿಂದ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಪಿಎಸ್ಐ ಹುದ್ದೆಗಳ ಆಯ್ಕೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಅನ್ಯಾಯವಾಗಿರುವ ಬಗ್ಗೆ ಹೋರಾಟ ನಡೆದಿದೆ. ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಲಾಗಿದೆ ಎಂದು ಹೇಳಲಾಗಿದೆ.