ಬೆಂಗಳೂರು : ಹೊಸ ವರ್ಷಾಚರಣೆಗೆ ಬಂಡೀಪುರ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ನೀಡದಿರಲು ನಿರ್ಧರಿದಲಾಗಿದೆ.
ಹೊಸ ವರ್ಷಾಚರಣೆಗೆ ಬಂಡೀಪುರದಲ್ಲಿ ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ಅರಣ್ಯ ಇಲಾಖೆ ತಿಳಿಸಿದೆ. ರಾಜ್ಯದ ವಿವಿಧ ಭಾಗಗಳಿಂದ ಬಂಡೀಪುರಕ್ಕೆ ಆಗಮಿಸುವ ಪ್ರವಾಸಿಗರಿಂದ ವನ್ಯಜೀವಿಗಳ ಸಹಜ ಜೀವನಕ್ಕೆ ಧಕ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಆರು ವರ್ಷಗಳಿಂದ ಅರಣ್ಯ ಇಲಾಖೆ ಅತಿಥಿ ಗೃಹಗಳನ್ನು ಬಾಡಿಗೆ ಕೊಡುವುದನ್ನು ನಿರ್ಬಂಧಿಸಿದೆ.
ಇನ್ನು ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿರುವ ಪ್ರವಾಸಿ ತಾಣ ಮುತ್ತತ್ತಿಗೆ ಎರಡು ದಿನಗಳ ಪ್ರವಾಸಿಗರಿಗೆ ತಾಲೂಕು ಆಡಳಿತ ನಿಷೇಧ ವಿಧಿಸಿದೆ.
ತುಮಕೂರು ಜಿಲ್ಲೆಯ ಪ್ರಮುಖ ಪ್ರವಾಸ ತಾಣಗಳಿಗೂ ನಿರ್ಬಂಧ ವಿಧಿಸಲಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹೊಸ ವರ್ಷದ ರಾತ್ರಿ ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಡಿ.31 ಸಂಜೆ 7ರವರೆಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ರಾತ್ರಿ 9ಕ್ಕೆ ತಾವರೆಕಟ್ಟೆ ಗೇಟ್ ಬಂದ್ ಮಾಡಲಾಗುತ್ತದೆ. ಚಾಮುಂಡಿ ಬೆಟ್ಟದಲ್ಲಿ ವಾಸಿಸುವ ಜನರಿಗೆ ಇದು ಅನ್ವಯಿಸುವುದಿಲ್ಲ. ಕಾನೂನು ಪಾಲಿಸಿ ಹೊಸ ವರ್ಷ ಆಚರಣೆ ಆಚರಿಸಿ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.
ಹೊಸ ವರ್ಷಾಚರಣೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಗ್ಗೆ 6 ಗಂಟೆವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಹಿತಿ ನೀಡಿದ್ದಾರೆ.